ಹೊಸದಿಗಂತ ವರದಿ ಚಿತ್ರದುರ್ಗ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಚಿತ್ರದುರ್ಗ ನಗರದಲ್ಲಿ ಜರುಗಿದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಸುಗಮವಾಗಿ ಹಾಗೂ ಶಾಂತಿಯುತವಾಗಿ ನೆರವೇರಿತು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಖುದ್ದಾಗಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಅಭ್ಯರ್ಥಿಗಳಿಗೆ ಒದಗಿಸಿರುವ ಸೌಲಭ್ಯ, ಅಕ್ರಮ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಸಿದರು.
ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗೆ ನಗರದಲ್ಲಿ ೨೬ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಪರೀಕ್ಷೆ ಬರೆಯಲು ಒಟ್ಟು ೯,೫೯೨ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ ೯,೧೨೭ ಹಾಜರಾದರೆ, ೪೬೫ ಅಭ್ಯರ್ಥಿಗಳು ಗೈರಾಗಿದ್ದಾರೆ.
ಇದನ್ನೂ ಓದಿ:
ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಹಾಗೂ ಮೊಬೈಲ್ ಜಾಮರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೆ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ಸುತ್ತ ಹಾಗೂ ಮಾರ್ಗಾಧಿಕಾರಿಗಳ ತಂಡಕ್ಕೆ ಪೊಲೀಸರನ್ನು ನೇಮಿಸಿ ಭದ್ರತೆ ಕಲ್ಪಿಸಲಾಗಿತ್ತು.
ಒಟ್ಟಾರೆ ಚಿತ್ರದುರ್ಗ ನಗರದಲ್ಲಿ ಭಾನುವಾರ ಜರುಗಿದ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಸುಗಮವಾಗಿ ಜರುಗಿತು.



