ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ನಿರಂತರ ಧಾರಾಕಾರ ಮಳೆ ಮುಂದುವರಿದಿರುವ ನಡುವೆಯೇ ಆ.8 ರವರೆಗೆ ‘ಮಹಾಮಳೆ’, ಪ್ರವಾಹ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಪ್ರವಾಹ, ಭೂಕುಸಿತ ಹಾಗೂ ಜಲಾವೃತ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದಿದೆ. ಪರಿಸ್ಥಿತಿಯ ತೀವ್ರತೆಯನ್ನು ಗಮನಿಸಿ ಭಾರತೀಯ ಹವಾಮಾನ ಇಲಾಖೆ ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ಕೋಜಿಕೋಡ್, ವಯನಾಡು, ಕಣ್ಣೂರು ಹಾಗೂ ಕಾಸರಗೋಡು ಸೇರಿದಂತೆ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಮಳೆಗೆ ಸಂಬಂಧಿಸಿದ ವಿವಿಧ ಅವಘಡಗಳಲ್ಲಿ ಕಳೆದ ಮೂರು ದಿನಗಳಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನದಿಗಳಲ್ಲಿ ಅಪಾಯದ ಮಟ್ಟ ಮೀರಿದ ನೀರು
ರಾಜ್ಯದ ಬಹುತೇಕ ಎಲ್ಲ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಆಯೋಗ ಪ್ರವಾಹ ಎಚ್ಚರಿಕೆ ನೀಡಿದೆ. ಹಲವು ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರೆಡ್ ಅಲರ್ಟ್ ಇರುವ ಜಿಲ್ಲೆಗಳ ಹೊರತಾಗಿ ಇನ್ನೂ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಮುಂದಿನ ದಿನಗಳಿಗೆ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಇದನ್ನೂ ಓದಿ:
ಪಶ್ಚಿಮಘಟ್ಟದ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಮಣ್ಣು ಕುಸಿತದ ಭೀತಿ ಹೆಚ್ಚಿರುವುದರಿಂದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕೊಟ್ಟಾಯಂ ಜಿಲ್ಲೆಯ ಮೀನಾಚಿಲ್ ನದಿಯಲ್ಲಿ ನೀರಿನ ಮಟ್ಟ ಸ್ವಲ್ಪ ಇಳಿಕೆಯಾಗಿದ್ದರೂ, ನಗರದ ಸುತ್ತಮುತ್ತಲಿನ ತಗ್ಗು ಪ್ರದೇಶಗಳು ಇನ್ನೂ ನೀರಿನಲ್ಲೇ ಮುಳುಗಿವೆ. ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ನೂರಾರು ಜನರು ಸಿಲುಕಿಕೊಂಡಿದ್ದಾರೆ.
ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎನ್ಡಿಆರ್ಎಫ್, ಅಗ್ನಿಶಾಮಕ ದಳ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ರಾಜ್ಯ ಸರ್ಕಾರ ಸಾರ್ವಜನಿಕರು ಅನಗತ್ಯ ಪ್ರಯಾಣ ತಪ್ಪಿಸಿ, ಜಿಲ್ಲಾಡಳಿತ ಹಾಗೂ ಹವಾಮಾನ ಇಲಾಖೆಯ ಅಧಿಕೃತ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದೆ.



