ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ–75ರ ಸೂರಿಕುಮೇರು ಸಮೀಪ ಗುರುವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳೂ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಮಧ್ಯದ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಸುರಕ್ಷಿತವಾಗಿ ಹೊರತೆಗೆದು ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
ಅವೈಜ್ಞಾನಿಕ ಕಾಮಗಾರಿಯೇ ಕಾರಣ?
ಅಪಘಾತ ನಡೆದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು, ಸಮರ್ಪಕ ಸುರಕ್ಷತಾ ಕ್ರಮಗಳ ಕೊರತೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳದಲ್ಲಿ ಎಚ್ಚರಿಕೆ ಫಲಕಗಳು, ರಿಫ್ಲೆಕ್ಟರ್ಗಳು, ವೇಗ ನಿಯಂತ್ರಣ ಸೂಚನೆಗಳು ಹಾಗೂ ವೈಜ್ಞಾನಿಕ ರೀತಿಯ ರಸ್ತೆ ವ್ಯವಸ್ಥೆ ಸಮರ್ಪಕವಾಗಿಲ್ಲ. ಇದರಿಂದ ವಾಹನ ಸವಾರರು ಗೊಂದಲಕ್ಕೀಡಾಗಿ ಅಪಘಾತಗಳು ಸಂಭವಿಸುತ್ತಿವೆ ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ:
ಸುರಿಕುಮೇರು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸುವುದು, ಸಮರ್ಪಕ ಸೂಚನಾ ಫಲಕಗಳನ್ನು ಅಳವಡಿಸುವುದು ಹಾಗೂ ವಾಹನ ಸವಾರರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.



