August 7, 2026
Friday, August 7, 2026
spot_img

ಬರ ನಿರ್ವಹಣೆ ಸಭೆ: ಮಳೆ ಮಾಪಕಗಳ ದುರಸ್ತಿಗೆ ಸಚಿವ ಟಿ. ರಘುಮೂರ್ತಿ ಖಡಕ್ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ:

ಮಳೆ ವರದಿ ಅಂಕಿ-ಅಂಶಗಳು ನಿಖರವಾಗಿಲ್ಲ. ಕೂಡಲೇ ಟೆಲಿಮೆಟ್ರಿಕ್ ಮಳೆ ಮಾಪಕಗಳ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಚಳ್ಳಕೆರೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕಿನ ವಿಪತ್ತು ನಿರ್ವಹಣೆ ವಿಷಯಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚಳ್ಳಕೆರೆ ತಾಲ್ಲೂಕಿನಲ್ಲಿ ಜನವರಿಯಿಂದ ಆಗಸ್ಟ್ ತಿಂಗಳವರೆಗೆ 191.8 ಮಿ.ಮೀ. ವಾಡಿಕೆ ಮಳೆ ನಿರೀಕ್ಷೆ ಇದ್ದು, ಇದುವರೆಗೆ 190 ಮಿ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಜಿಲ್ಲೆಯಲ್ಲಿ ಕೇವಲ ಶೇ.16.5ರಷ್ಟು ಮಾತ್ರ ಬಿತ್ತನೆಯಾಗಿದೆ. ಸಮರ್ಪಕ ಮಳೆಯಾಗಿದ್ದರೆ ಬಿತ್ತನೆ ಏಕೆ ಕುಂಠಿತವಾಗುತ್ತಿತ್ತು ಎಂದು ಪ್ರಶ್ನಿಸಿದರು.

26 ಕೇಂದ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ

ಚಳ್ಳಕೆರೆ ತಾಲ್ಲೂಕಿನಲ್ಲಿ ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರದಿಂದ ಸ್ಥಾಪಿಸಲಾದ 44 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಿದ್ದು, ಅವುಗಳಲ್ಲಿ 26 ಕೇಂದ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದ ಕೇಂದ್ರಗಳ ದುರಸ್ತಿ ಕಾರ್ಯವನ್ನು ಪ್ರಾಧಿಕಾರ ಕೈಗೊಂಡಿದೆ. ತಾಲ್ಲೂಕಿನಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿದ್ದರೂ, ಅದು ಬಿತ್ತನೆ ಸಮಯದಲ್ಲಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾಹಿತಿ ನೀಡಿದರು.

ವರ್ಗೀಕೃತ ರೈತರ ಮಾಹಿತಿ ಸಂಗ್ರಹಕ್ಕೆ ಸೂಚನೆ

ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಾಗದ ಮಾಹಿತಿಯನ್ನು ನೀಡುತ್ತಿದ್ದಾರೆ. ಬಿತ್ತನೆ ಕ್ಷೇತ್ರ ಹಾಗೂ ರೈತರ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಆದ್ದರಿಂದ ತಾಲ್ಲೂಕುವಾರು ಕೃಷಿ, ತೋಟಗಾರಿಕೆ ಹಾಗೂ ಕೃಷಿ-ತೋಟಗಾರಿಕೆ ಎರಡನ್ನೂ ಮಾಡುತ್ತಿರುವ ರೈತರ ಮಾಹಿತಿಯನ್ನು ವರ್ಗೀಕೃತ ಮಾದರಿಯಲ್ಲಿ ಸಂಗ್ರಹಿಸಬೇಕು. ಜೊತೆಗೆ ಮಳೆಯಾಶ್ರಿತ ಕೃಷಿ, ನೀರಾವರಿ ಕೃಷಿ ಹಾಗೂ ಬೆಳೆವಾರು ರೈತರ ವಿವರಗಳನ್ನು ಸಿದ್ಧಪಡಿಸುವಂತೆ ಸಚಿವರು ಸೂಚಿಸಿದರು.

ಇದನ್ನೂ ಓದಿ:

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಚಳ್ಳಕೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆಯಾಗಿದೆ. ತಾಲ್ಲೂಕಿನಲ್ಲಿ 1,50,082 ಹೆಕ್ಟೇರ್ ಬಿತ್ತನೆ ಕ್ಷೇತ್ರವಿದ್ದು, 65,810 ರೈತರು ಇದ್ದಾರೆ. ಒಟ್ಟು ಶೇ.16.5ರಷ್ಟು ಬಿತ್ತನೆಯಾಗಿದ್ದು, 59,756 ರೈತರು ಫಸಲ್ ಭೀಮಾ ಯೋಜನೆಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕೃಷಿ ಜಂಟಿ ನಿರ್ದೇಶಕ ಬಿ. ಮಂಜುನಾಥ್ ಮಾಹಿತಿ ನೀಡಿದರು.

ಚಳ್ಳಕೆರೆ ತಾಲ್ಲೂಕಿನಲ್ಲಿ 5,400 ತೋಟಗಾರಿಕೆ ರೈತರಿದ್ದು, ಅವರಲ್ಲಿ 5,068 ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ತೋಟಗಾರಿಕೆ ಬೆಳೆಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದ ಎಲ್ಲ ರೈತರು ಕಡ್ಡಾಯವಾಗಿ ವಿಮೆ ಮಾಡಿಸಬೇಕಾಗಿದ್ದು, ಆಗಸ್ಟ್ 15ರವರೆಗೆ ಅವಕಾಶ ನೀಡಲಾಗಿದೆ. ಲೀಡ್ ಬ್ಯಾಂಕ್ ಮೂಲಕ ನೋಂದಣಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ತಿಳಿಸಿದರು.

ಓವರ್ ಹೆಡ್ ಟ್ಯಾಂಕ್ ಭರ್ತಿಗೆ ಆಗಸ್ಟ್ 30 ಗಡುವು

ತುಂಗಭದ್ರಾ ಡ್ಯಾಂ ಹಿನ್ನೀರಿನಿಂದ ಮೊಳಕಾಲ್ಮೂರು ಹಾಗೂ ಚಳ್ಳಕೆರೆ ತಾಲ್ಲೂಕುಗಳಿಗೆ ರೂಪಿಸಲಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಎಲ್ಲಾ ಓವರ್ ಹೆಡ್ ಟ್ಯಾಂಕ್‌ಗಳನ್ನು ಭರ್ತಿ ಮಾಡಿ ಮನೆಮನೆಗೆ ನೀರು ಸರಬರಾಜು ಮಾಡಬೇಕು ಎಂದು ಸಚಿವರು ಸೂಚಿಸಿದರು. ಯೋಜನೆ ಪೂರ್ಣಗೊಂಡಿದ್ದರೂ ಪೈಪ್‌ಲೈನ್ ಕಾಮಗಾರಿ ಬಾಕಿ ಇರುವ ಕಾರಣ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿಲ್ಲ. ಆಗಸ್ಟ್ 30ರೊಳಗೆ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಗಡುವು ವಿಧಿಸಿದರು.

ಸಭೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ರಾಮಪ್ಪ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !