ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಕೆಲವು ದಿನ ಮಳೆಯ ವಿರಾಮದ ಬಳಿಕ ಮತ್ತೆ ಭಾರೀ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.
ಇಂದು–ನಾಳೆ ಯೆಲ್ಲೋ ಅಲರ್ಟ್
ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಜಲಾಶಯಗಳು ತುಂಬಿಕೊಂಡಿರುವುದರಿಂದ ಹೆಚ್ಚುವರಿ ಮಳೆಯು ಪ್ರವಾಹ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಇಲಾಖೆ ಎಚ್ಚರಿಸಿದೆ.
ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳಾದ ಕಲ್ಬುರ್ಗಿ, ವಿಜಯಪುರ, ಬಾಗಲಕೋಟೆ ಮತ್ತು ಕೊಪ್ಪಳ ಜಿಲ್ಲೆಗಳಿಗೆ ಸೆಪ್ಟೆಂಬರ್ 14ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರೈತರು ಹಾಗೂ ಜನಸಾಮಾನ್ಯರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ ಮಳೆ ಮುಂದುವರಿಕೆ
ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು, ಶುಕ್ರವಾರವೂ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಇಂದು ನಗರದ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ದಾಖಲಾಗುವ ನಿರೀಕ್ಷೆ ಇದೆ. ಮೋಡ ಮುಸುಕಿದ ವಾತಾವರಣ, ತುಂತುರು ಮಳೆ ಶನಿವಾರ ಮತ್ತು ಭಾನುವಾರ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಸೆಪ್ಟೆಂಬರ್ 15ರಿಂದ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದ ಜೊತೆಗೆ ತೆಲಂಗಾಣ, ಕೇರಳ ಮತ್ತು ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ತಮಿಳುನಾಡಿನ ಹಲವು ಭಾಗಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.