ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಸೊಪ್ಪಡ್ಲ ಗ್ರಾಮದಲ್ಲಿ ಮಳೆ ಕೊರತೆ ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ವಿವಿಧ ಬೆಳೆಗಳಿಗೆ ಉಂಟಾಗಿರುವ ಹಾನಿಯನ್ನು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ನೇತೃತ್ವದ ಬಿಜೆಪಿ ತಂಡ ವೀಕ್ಷಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು.
ಬಿಜೆಪಿ ತಂಡವು ಸೊಪ್ಪಡ್ಲ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿ, ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದ ಹಾನಿಗೊಳಗಾದ ಬೆಳೆಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಬೆಳೆಗಳ ಸ್ಥಿತಿ, ನಷ್ಟದ ಪ್ರಮಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ರೈತರಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ರೈತರು ಬಿಜೆಪಿ ನಿಯೋಗದೊಂದಿಗೆ ಮಾತನಾಡಿ, ಸಮಯಕ್ಕೆ ಸರಿಯಾಗಿ ಮಳೆಯಾಗದಿರುವುದು ಹಾಗೂ ಹವಾಮಾನದಲ್ಲಿನ ಏರುಪೇರುಗಳಿಂದಾಗಿ ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ. ಹಲವು ಜಮೀನುಗಳಲ್ಲಿ ನಿರೀಕ್ಷಿತ ಇಳುವರಿ ಬರುವ ಸಾಧ್ಯತೆ ಕಡಿಮೆಯಾಗಿದೆ ಎಂದು ಬೇರಸ ಹೋರ ಹಾಕಿದರು.
ಈಗಾಗಲೇ ಬಿತ್ತನೆ, ಬೀಜ, ರಸಗೊಬ್ಬರ, ಔಷಧಿ, ಕೃಷಿ ಕಾರ್ಮಿಕರು ಹಾಗೂ ಇತರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಹಣ ಖರ್ಚು ಮಾಡಲಾಗಿದ್ದು, ಬೆಳೆಹಾನಿಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.
ರೈತರ ಸಮಸ್ಯೆಗಳನ್ನು ಆಲಿಸಿದ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು, ಬೆಳೆಹಾನಿಯ ನೈಜ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಬೆಳೆಹಾನಿಯ ಸಮರ್ಪಕ ಹಾಗೂ ಪಾರದರ್ಶಕ ಸಮೀಕ್ಷೆ ನಡೆಸಿ, ಹಾನಿಗೊಳಗಾದ ಪ್ರತಿಯೊಬ್ಬ ಅರ್ಹ ರೈತನಿಗೂ ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರವನ್ನು ಶೀಘ್ರವಾಗಿ ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಬೆಳೆಹಾನಿ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಅಧಿಕಾರಿಗಳು ಕೇವಲ ದಾಖಲೆಗಳ ಆಧಾರದ ಮೇಲೆ ವರದಿ ಸಿದ್ಧಪಡಿಸದೆ, ಜಮೀನುಗಳಿಗೆ ಖುದ್ದಾಗಿ ಭೇಟಿ ನೀಡಿ ವಾಸ್ತವಿಕ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಯಾವುದೇ ಅರ್ಹ ರೈತರು ಪರಿಹಾರದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ತಂಡ ಆಗ್ರಹಿಸಿತು.
ಇದನ್ನೂ ಓದಿ:
ಕೃಷಿಯನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ರೈತರಿಗೆ ಬೆಳೆಹಾನಿ ದೊಡ್ಡ ಆರ್ಥಿಕ ಹೊಡೆತ ನೀಡಿದ್ದು, ಈ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ಧಾವಿಸುವ ಅಗತ್ಯವಿದೆ. ಬೆಳೆಹಾನಿಯ ಪ್ರಮಾಣವನ್ನು ವೈಜ್ಞಾನಿಕವಾಗಿ ಅಂದಾಜಿಸಿ, ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ನೀಡುವ ಮೂಲಕ ರೈತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದರು.
ಈ ವೇಳೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಶಶಿಕಲಾ ಜೊಲ್ಲೆ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಶಾಸಕ ವಿಠ್ಠಲ ಹಲಗೇಕರ, ದುರ್ಯೋಧನ ಐಹೊಳೆ, ಮಾಜಿ ಶಾಸಕ ಸಂಜಯ ಪಾಟೀಲ, ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ (ನಡಹಳ್ಳಿ), ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಸೊಪ್ಪಡ್ಲ ಗ್ರಾಮದ ರೈತರು, ಹಾಗೂ ರೈತ ಮುಖಂಡರು ಪಾಲ್ಗೊಂಡಿದ್ದರು.



