August 11, 2026
Tuesday, August 11, 2026
spot_img

ಚಿತ್ರದುರ್ಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ: ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿದ ವಾಹನಗಳು

ಹೊಸದಿಗಂತ ವರದಿ ಚಿತ್ರದುರ್ಗ:

ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸುವುದಕ್ಕಾಗಿ ದೇಶಾದ್ಯಂತ ಹಮ್ಮಿಕೊಳ್ಳಲಾಗಿದ್ದ ಚಳುವಳಿಗೆ ಬೆಂಬಲಿಸಿ ವಿವಿಧ ಸಂಘಟನೆಗಳು ಗಾಂಧಿ ವೃತ್ತದಲ್ಲಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಪರಿಣಾಮ ಪ್ರವಾಸಿ ಮಂದಿರದ ಮುಂಭಾಗದಿಂದ ಗಾಂಧಿ ಸರ್ಕಲ್‌ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು.

 ಸಂಯುಕ್ತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ, ವಿದೇಶಿ ಕಂಪನಿಗಳು, ಕಾರ್ಪೊರೇಟರ್ಗಳು, ಬಂಡವಾಳ ಶಾಹಿಗಳು ನಮ್ಮ ದೇಶದ ರೈತರು ಕಾರ್ಮಿಕರ ಮೇಲೆ ಸವಾರಿ ಮಾಡುತ್ತಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದ ಕಾರಣ ಸಾಲದ ಸುಳಿಗೆ ಸಿಲುಕಿರುವ ರೈತ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆ. ನರೇಗಾ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ವಿಬಿ-ಜಿರಾಮ್‌ಜಿ ಎಂದು ಬದಲಾವಣೆ ಮಾಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಬಡವರಿಗೆ ಕೆಲಸ ಸಿಗುತ್ತಿಲ್ಲ ಎಂದು ಕೇಂದ್ರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಗುತ್ತಿಗೆ ನೌಕರಿಯನ್ನು ಬಿಟ್ಟರೆ ಇನ್ನು ಮುಂದೆ ಯಾರಿಗೂ ಖಾಯಂ ಕೆಲಸವಿಲ್ಲ. ಇವು ಕಾರ್ಮಿಕರಿಗೆ ಮರಣ ಶಾಸನವಾಗಿ ಪರಿಣಮಿಸಿದೆ. ರೈತರಿಗೆ ಅತ್ಯವಶ್ಯಕವಾಗಿರುವ ಬೀಜ, ರಸಗೊಬ್ಬರ, ಕೀಟನಾಶಕಗಳಿಗೆ ಸಿಂಪಡಿಸುವ ಔಷಧಿಗಳ ಮೇಲೂ ಕೇಂದ್ರ ಸರ್ಕಾರ ಲಗ್ಗೆಯಿಟ್ಟಿರುವುರಿಂದ ರೈತ ಹೈರಾಣಾಗಿದ್ದಾನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರ ಹಿತ ಕಾಯುವ ಕಾಯಿದೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ, ಗಾಂಧಿಜಿ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದ ಭಾಗವಾಗಿ ಈಗ ಕಾರ್ಪೊರೇಟ್ ಕಂಪನಿಗಳನ್ನು ದೇಶದಿಂದ ಓಡಿಸುವ ಚಳುವಳಿ ಆರಂಭವಾಗಿದೆ. ಸಾವಿರಾರು ಬಹುರಾಷ್ಟ್ರೀಯ ಕಂಪನಿಗಳು ನಮ್ಮ ದೇಶಕ್ಕೆ ಕಾಲಿಟ್ಟಿವೆ. ಕೇಂದ್ರ ಸರ್ಕಾರ ಜನ ವಿರೋಧಿ ಹಾಗೂ ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ಸಂಯುಕ್ತ ಹೋರಾಟ ಕರ್ನಾಟಕ ಸಂಚಾಲಕ ಕುಮಾರ್ ಸಮತಳ ಮಾತನಾಡಿ, ರೈತರು ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಬಿಡದಿ ಟೌನ್ಶಿಪ್ಗಾಗಿ ರೈತರ ಫಲವತ್ತಾದ ಭೂಮಿಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಕ್ಕು ಕೊಡುತ್ತಿಲ್ಲ. ಮನೆಯಿಲ್ಲದವರಿಗೆ ಮನೆಗಳನ್ನು ಕೊಡಬೇಕೆನ್ನುವುದು ನಮ್ಮ ಬಹುದಿನಗಳ ಬೇಡಿಕೆ ಎಂದರು.

ಇದನ್ನೂ ಓದಿ:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ,  ರೈತ ಮುಖಂಡರುಗಳಾದ ಧನಂಜಯ ಹಂಪಯ್ಯನಮಾಳಿಗೆ, ಹೊರಕೇರಪ್ಪ, ಡಿ.ಎಸ್.ಮಲ್ಲಿಕಾರ್ಜುನ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಸುರೇಶ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಸಿಐಟಿಯು.ನ ಮಲಿಯಪ್ಪ, ತಿಪ್ಪೇಸ್ವಾಮಿ, ಅಖಂಡ ಕರ್ನಾಟಕ ರೈತ ಸಂಘದ ಶಾಂತಮ್ಮ, ಹನುಮಂತಪ್ಪ ಗೋನೂರು, ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ ಸೇರಿದಂತೆ ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !