ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಇಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮಳೆಯ ಜತೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರಾವಳಿಯಲ್ಲಿ ನಿರಂತರ ಗಾಳಿ
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಳೆಯೊಂದಿಗೆ ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿ ತೀರದ ಜನರು ಎಚ್ಚರದಿಂದ ಇರಬೇಕು ಎಂದು ತಿಳಿಸಲಾಗಿದೆ.
ಉತ್ತರ ಒಳನಾಡಿನಲ್ಲೂ ಮುಂದುವರೆದ ಮುಂಗಾರು
ಉತ್ತರ ಒಳನಾಡಿನಲ್ಲೂ ಮುಂಗಾರು ಮುಂದುವರೆಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಜಾಗರೂಕರಾಗಿರಲು ಕೋರಲಾಗಿದೆ.
ಬೆಂಗಳೂರು ಹಾಗೂ ದಕ್ಷಿಣ ಒಳನಾಡು
ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಈ ಜಿಲ್ಲೆಗಳಲ್ಲೂ ಸಹ ಗಂಟೆಗೆ 40ರಿಂದ 50 ಕಿ ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



