ಹೊಸದಿಗಂತ ವರದಿ ಬೆಳಗಾವಿ:
ಚಿಕ್ಕೋಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಮಾಜಿ ಸಂಸದ ಹಾಗೂ ಎಐಸಿಸಿ ವೀಕ್ಷಕ ಡಾ. ಕೆ. ಜಯಕುಮಾರ್ ಹೇಳಿದರು.
ಬುಧವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಜಿಲ್ಲಾ ಹಾಗೂ ಬ್ಲಾಕ್ ಅಧ್ಯಕ್ಷರ ನೇಮಕಕ್ಕೆ ತಳಮಟ್ಟದ ಕಾರ್ಯಕರ್ತರಿಂದ ನೇರವಾಗಿ ಅಭಿಪ್ರಾಯ ಸಂಗ್ರಹಿಸುವ ಹೊಸ ಹಾಗೂ ಪಾರದರ್ಶಕ ಪ್ರಕ್ರಿಯೆಯನ್ನು ನಡೆಸಲಾಗಿದೆ. ಹಿರಿಯ ನಾಯಕರು ಹಾಗೂ ವೀಕ್ಷಕರು ನೇರವಾಗಿ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯಲಾಗಿದೆ. ಅದರ ಆಧಾರದ ಮೇಲೆ ಪಟ್ಟಿಯನ್ನು ಹೈಕಮಾಂಡ್ ಗೆ ಸಲ್ಲಿಸಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದ ಬಳಿಕ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದರು.
ಈಗಾಗಲೇ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಒಂಬತ್ತು ದಿನಗಳ ಕಾಲ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಬೂತ್ ಮಟ್ಟದಿಂದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಮಟ್ಟದ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಅಲ್ಲದೆ, ಮಹಿಳಾ ಕಾರ್ಯಕರ್ತರು, ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಪಕ್ಷ ಸಂಘಟನೆಗಳ ಸದಸ್ಯರ ಅಭಿಪ್ರಾಯಗಳನ್ನೂ ಪಡೆಯಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:
ಎಂಟು ವಿಧಾನಸಭಾ ಕ್ಷೇತ್ರಗಳ ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರ ಅಭಿಪ್ರಾಯಗಳನ್ನೂ ದಾಖಲಿಸಲಾಗಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಅಭ್ಯರ್ಥಿಯ ಅರ್ಜಿಯನ್ನು ಗಂಭೀರವಾಗಿ ಪರಿಶೀಲಿಸಲಾಗುವುದು. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಸೂಕ್ತ ಅಭ್ಯರ್ಥಿಗೆ ಅವಕಾಶ ಕಲ್ಪಿಸುವುದೇ ಈ ಪ್ರಕ್ರಿಯೆಯ ಮುಖ್ಯ ಉದ್ದೇಶವಾಗಿದೆ ಎಂದರು.
ಕಾರ್ಯಕರ್ತರಿಂದ ಸಂಗ್ರಹಿಸಿರುವ ಅಭಿಪ್ರಾಯಗಳ ಸಂಪೂರ್ಣ ವರದಿಯನ್ನು ಹೈಕಮಾಂಡ್ಗೆ ಸಲ್ಲಿಸಲಾಗುವುದು. ವರದಿಯನ್ನು ಆಧರಿಸಿ ಪಕ್ಷದ ವರಿಷ್ಠರು ಅಂತಿಮವಾಗಿ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ ಎಂದು ಡಾ. ಕೆ. ಜಯಕುಮಾರ್ ಹೇಳಿದರು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಲಕ್ಷ್ಮಣ ಚಿಂಗಳೆ, ವಿಧಾನ ಪರಿಷತ್ ಸದಸ್ಯರಾದ ಪಿ.ಸಿ. ಮೋಹನ್, ನಾಗರಾಜ ಯಾದವ್, ಸುನಿಲ್ ಹನುಮನ್ನವರ್, ಸಚಿವರ ಆಪ್ತ ಸಹಾಯಕ ಮಲಗೌಡ ಪಾಟೀಲ್, ರಕ್ಷಿತಾ ಇಟಿ, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.



