August 15, 2026
Saturday, August 15, 2026
spot_img

ಮಹಿಳಾ ಸಚಿವ ಸ್ಥಾನ ಯಾರಿಗೆ?: ಮೂವರ ಹೆಸರು ಚರ್ಚೆಯಲ್ಲಿದೆ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಒಂದು ಸಚಿವ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ಮಹಿಳಾ ಕೋಟಾದಡಿ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆಯುತ್ತಿದ್ದು, ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ಗಾಯತ್ರಿ ಶಾಂತೇಗೌಡ ಅವರ ಹೆಸರುಗಳು ಮುಂಚೂಣಿಯಲ್ಲಿವೆ. ಮೂವರಲ್ಲಿ ಯಾರಿಗೆ ಸಚಿವ ಸ್ಥಾನ ಒಲಿಯಲಿದೆ ಎಂಬ ಕುತೂಹಲ ಇದೀಗ ರಾಜಕೀಯ ವಲಯದಲ್ಲಿ ಮೂಡಿದೆ.

ಶನಿವಾರ ಈ ಕುರಿತು ಬೆಳಗಾವಿಯಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, “ಮಹಿಳೆಯರು ಬರುವವರೆಗೆ ಮುಖ್ಯಮಂತ್ರಿಗಳು ನಿರ್ವಹಣೆ ಮಾಡುತ್ತಾರೆ. ಯಾರನ್ನು ಸಚಿವರನ್ನಾಗಿ ಮಾಡಬೇಕು ಎಂಬ ಗೊಂದಲ ಇರುವುದರಿಂದ ವಿಳಂಬವಾಗುತ್ತಿದೆ. ಮೂವರೂ ಸಮರ್ಥರಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಪ್ರಶ್ನೆ ಇದೆ. ಪಕ್ಷ ಮೂವರಲ್ಲಿ ಯಾರನ್ನು ಆಯ್ಕೆ ಮಾಡುತ್ತದೆಯೋ, ಅವರ ಪರವಾಗಿ ನಾವು ನಿಲ್ಲುತ್ತೇವೆ” ಎಂದರು.

ಖಾಲಿ ಇರುವ ಒಂದು ಸಚಿವ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ:

ಜಮೀರ್ ಅಹಮದ್ ಧ್ವಜಾರೋಹಣ ವಿವಾದದ ಬಗ್ಗೆ ಪ್ರತಿಕ್ರಿಯೆ:

ಸಚಿವ ಜಮೀರ್ ಅಹಮದ್ ಅವರು ಧ್ವಜಾರೋಹಣಕ್ಕೆ ಹಿಂದೇಟು ಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಬಿಬಿಎಂಪಿ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್ ಅಹಮದ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಅವರನ್ನೇ ಕೇಳಬೇಕು ಎಂದು ಹೇಳಿದರು.

ಬಿಜೆಪಿಯವರು ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, “ಬಿಜೆಪಿಯವರೇ ತಮ್ಮ ಕಚೇರಿಗಳಲ್ಲಿ ಧ್ವಜ ಹಾರಿಸುವುದಿಲ್ಲ. ಹೀಗಿರುವಾಗ ನಮ್ಮ ಮೇಲೆ ಆರೋಪ ಮಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ. ಕಳೆದ 70 ವರ್ಷಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ನಡೆದಿವೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ” ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !