ಹೊಸದಿಗಂತ ವರದಿ ಕಾರವಾರ:
ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಎಂದೆಂದಿಗೂ ಸ್ಮರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ರೂಪಿಸಲು ಪ್ರತಿಯೊಬ್ಬರೂ ಸಹಕರಿಸಬೇಕು. ದೇಶ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಬಲಿಷ್ಠವಾಗಿ ಹೊರಹೊಮ್ಮಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ‘ಹರ್ ಘರ್ ತಿರಂಗಾ’ ರಾಜ್ಯ ಸಂಚಾಲಕಿ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾರವಾರ ನಗರದ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶಾದ್ಯಂತ ತಿರಂಗಾ ಯಾತ್ರೆ ನಡೆಸಲಾಗಿದೆ. ಭಾರತ ಇಂದು ಜಾಗತಿಕ ಮಟ್ಟದಲ್ಲಿ ಶಕ್ತಿಯುತ ರಾಷ್ಟ್ರವಾಗಿ ಗುರುತಿಸಿಕೊಂಡಿದೆ. ಪ್ರಧಾನಿ ಮೋದಿ ಅವರು ವಿವಿಧ ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಗೌರವ ದೊರೆಯುತ್ತಿದೆ ಎಂದು ರೂಪಾಲಿ ಎಸ್. ನಾಯ್ಕ ಹೇಳಿದರು.
ಇದನ್ನೂ ಓದಿ:
2047ರ ವೇಳೆಗೆ ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ರೂಪಿಸುವುದು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವಾಗಿದೆ. ಈ ಗುರಿ ಸಾಕಾರಗೊಳ್ಳಲು ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು. ದೇಶದ ಪ್ರತಿಯೊಬ್ಬ ನಾಗರಿಕನಲ್ಲೂ ದೇಶಪ್ರೇಮದ ಭಾವನೆ ಮತ್ತಷ್ಟು ಗಟ್ಟಿಯಾಗಬೇಕು ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರುಡೇಕರ್, ಗ್ರಾಮೀಣ ಮಂಡಲದ ಸುಭಾಷ್ ಗುನಗಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ಸುನಿಲ್ ಸೋನಿ, ರವಿರಾಜ್ ಅಂಕೋಲೆಕರ್, ಮನೋಜ್ ಭಟ್, ಪರ್ಬತ್ ನಾಯ್ಕ್, ನೈನಾ ನಿಲಾವರ್, ವೈಶಾಲಿ ತಾಂಡೆಲ್, ಬಿಜೆಪಿ ಪದಾಧಿಕಾರಿಗಳು, ನಗರಸಭೆ ಮಾಜಿ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.



