ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸೆಪ್ಟೆಂಬರ್ 22ರಿಂದ ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆ.22ರಿಂದ ಜಾತಿಗಣತಿ ಮರು ಸಮೀಕ್ಷೆ ನಡೆಸಲಾಗುತ್ತಿದ್ದು, ಅ.7ರವರೆಗೆ ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಯಲಿದೆ. ವೈಜ್ಞಾನಿಕವಾಗಿ ಸಮೀಕ್ಷೆ ನಡೆಯಬೇಕು. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.
2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10 ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ ವಹಿಸಲಾಗಿದೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಬೇಕು ಎಂದು ಸಂವಿಧಾನ ಹೇಳುತ್ತದೆ. ಡಾ.ಅಂಬೇಡ್ಕರ್ ಅವರು ಹೇಳಿದಂತೆ 1950 ಜನವರಿ 26ರಂದು ಜಾರಿಯಾದಾಗ, ನಾವು ವೈರುಧ್ಯತೆಯಿಂದ ಕೂಡಿದ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ನಮ್ಮ ಸ್ವಾತಂತ್ರ್ಯ ಯಶಸ್ವಿಯಾಗಬೇಕಾದರೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಅಸಮಾನತೆಯನ್ನು ತೊಲಗಿಸಲೇ ಬೇಕು ಎಂದು ಹೇಳಿದ್ದರು. ಸ್ವಾತಂತ್ರ್ಯ ದೊರೆತು ಇಷ್ಟು ವರ್ಷಗಳಾದರೂ ಅಸಮಾನತೆಯನ್ನು ಸಂಪೂರ್ಣವಾಗಿ ತೊಲಗಿಸಲು ನಮಗೆ ಸಾಧ್ಯವಾಗಿಲ್ಲ. ಸಮಾನತೆಯನ್ನು , ಸಮಾನ ಅವಕಾಶ ಒದಗಿಸುವ ನಿಟ್ಟಿನಲ್ಲಿ ನಾವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡಿದ್ದೇವೆ. ರಾಜ್ಯದಲ್ಲಿ ಸುಮಾರು 7ಕೋಟಿ ಜನಸಂಖ್ಯೆಯಿದ್ದು, ಸುಮಾರು 2ಕೋಟಿಯಷ್ಟು ಕುಟುಂಬಗಳಿವೆ. ಇವರೆಲ್ಲರಿಗೂ ಸಮಾನ ಅವಕಾಶ ಒದಗಿಸುವುದು ನಮ್ಮ ಕರ್ತವ್ಯ ಎಂದರು.
ಗ್ಯಾರಂಟಿ ಯೋಜನೆಗಳ ಮೂಲಕ ಅಸಮಾನತೆಯನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಲು ಪ್ರಯತ್ನ ಮಾಡಿದ್ದೇವೆ. ನಾವು ಹಿಂದೆ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಭಾಗ್ಯ ಯೋಜನೆಗಳ ಮೂಲಕ ಸಹ ಇದನ್ನು ಸಾಧಿಸಲು ಪ್ರಯತ್ನಿಸಿದ್ದೇವೆ. ಹಿಂದುಳಿದವರ ಬಡತನ, ನಿರುದ್ಯೋಗ, ಅನಕ್ಷರತೆ ಹೋಗಬೇಕಾದರೆ ವಿಶೇಷ ಪ್ರಯತ್ನದ ಅಗತ್ಯವಿದೆ ಎಂಬುವುದನ್ನು ನಾವು ತಿಳಿದಿದ್ದೇವೆ. ಈ ಹಿನ್ನೆಲೆಯಲ್ಲಿ 7ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ. ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು ಎಂದರು.
ಆಯೋಗ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು. ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಲಾಗುವುದು. ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು.ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ ಕೇಳುವ 60 ಪ್ರಶ್ನೆಗಳಿಗೆ ಎಲ್ಲರೂ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ, 60 ಪ್ರಶ್ನೆಗೆ ಉತ್ತರಿಸಿ
ಇನ್ನೂ ಮಧುಸೂದನ್ ನಾಯಕ್ ಕಮಿಟಿ ವೈಜ್ಞಾನಿಕ ಸರ್ವೆ ಮಾಡಬೇಕು. ವರದಿಯನ್ನ ಡಿಸೆಂಬರ್ ಒಳಗೆ ಕೊಡಬೇಕು. ಈ ಬಾರಿ ವಿನೂತನ ಸರ್ವೇ ಪದ್ದತಿ ಮಾಡ್ತಿದ್ದೇವೆ. ಮೀಟರ್ ರೀಡರ್‌ಗಳು, ಆರ್‌ಆರ್ ನಂಬರ್, ಜಿಯೊ ಟ್ಯಾಗ್ ಮಾಡಿ ಮನೆ ಮನೆಗೆ ಪಟ್ಟಿ ಮಾಡಿ ನಂಬರ್ ಕೊಡ್ತಾರೆ. UHI ನಂಬರ್ ಮೀಟರ್ ರೀಡರ್ ಹಾಕ್ತಾರೆ. 2 ಕೋಟಿ ಮನೆಗೂ ಸ್ಟಿಕ್ಕರ್ ಅಂಟಿಸುವ ಅಂಟಿಸೋ ಕೆಲಸ ಮಾಡ್ತಾರೆ. ಇವತ್ತಿನವರೆಗೂ 1.55 ಕೋಟಿ ಮನೆಗಳಿಗೆ ಸ್ಟಿಕ್ಕರ್ (ಸ್ಲಿಪ್) ಅಂಟಿಸಿದ್ದಾರೆ. ಇದಾದ ಮೇಲೆ ಮನೆ ಮನೆಗೆ ಟೀಚರ್ ಸರ್ವೆ ಮಾಡ್ತಾರೆ. BPL ಕಾರ್ಡ್, ಆಧಾರ್ ಕಾರ್ಡ್ ಇದ್ದರೆ ಮೊಬೈಲ್ ಗೆ ಲಿಂಕ್ ಮಾಡ್ತಾರೆ. ಮೊಬೈಲ್ ಇಲ್ಲದೇ ಹೋದ್ರೆ ಆ ಮನೆಗಳ ಸರ್ವೆ ಮಾಡ್ತಾರೆ. ಎಲ್ಲರು ಈ ಸರ್ವೆಯಲ್ಲಿ ಭಾಗವಹಿಸಬೇಕು. ಈ ಸರ್ವೆಯಲ್ಲಿ 60 ಪ್ರಶ್ನೆ ಕೇಳ್ತಾರೆ. ಜಾತಿ, ಧರ್ಮ, ಉದ್ಯೋಗ, ಶಿಕ್ಷಣ, ಸೇರಿ ಕುಟುಂಬದ ಸಂಪೂರ್ಣ ಮಾಹಿತಿ ಇರೋ 60 ಪ್ರಶ್ನೆ ಕೇಳ್ತಾರೆ. ಎಲ್ಲಾ ಜನರು ಇದರಲ್ಲಿ ಭಾಗಿಯಾಗಬೇಕು. ಪ್ರತಿಯೊಬ್ಬರೂ 60 ಪ್ರಶ್ನೆಗೆ ಉತ್ತರ ಕೊಡಬೇಕು. ಯಾರೂ ಸರ್ವೆಯಿಂದ ತಪ್ಪಿಸಿಕೊಳ್ಳಬಾರದು ಎಂದು ಸಿಎಂ ಕಿವಿಮಾತು ಹೇಳಿದ್ದಾರೆ.