ಹೊಸದಿಗಂತ ವರದಿ ಚಿತ್ರದುರ್ಗ :
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾದನ ದುರುಪಯೋಗ ಹಗರಣದ ರೂವಾರಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಸೋವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಈ ಬಗ್ಗೆ ಬಿಜೆಪಿ ಯುವ ಮುಖಂಡ ರಘುಚಂದನ್ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಕಾಂಗ್ರೆಸ್ ಪಕ್ಷ ಚುನಾವಣೆಗಾಗಿ ಬಳಸಿಕೊಂಡಿದೆ. ಅಲ್ಲದೇ ಎಸ್ಸಿಪಿ, ಟಿಎಸ್ಪಿ ಹಣವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಬಳಸಬೇಕು. ಆದರೆ ಶೋಷಿತರ ಕಲ್ಯಾಣಕ್ಕೆ ಬಳಸಬೇಕಾದ ಹಣವನ್ನು ರಾಜಕೀಯ ದುರುದ್ದೇಶಗಳಿಗೆ ಬಳಸಿಕೊಳ್ಳಲಾಗಿದೆ. ಚುನಾವಣಾ ಅಕ್ರಮಗಳಿಗೆ ಬಳಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ಸಚಿವ ನಾಗೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವರು ಅಧಿಕಾರದಲ್ಲಿ ಮುಂದುವರಿಯುತ್ತಿರುವುದು ಈ ರಾಜ್ಯದ ದುರಂತ. ಪ್ರಸ್ತುತ ರಾಜಕಾರಣದಲ್ಲಿ ನೈತಿಕತೆ ಹಾಗೂ ಬದ್ಧತೆ ಕಣ್ಮರೆಯಾಗುತ್ತಿದ್ದು, ಸಾರ್ವಜನಿಕವಾಗಿ ಉತ್ತರದಾಯಿಯಾಗಿರಬೇಕಾದ ಜನಪ್ರತಿನಿಧಿಗಳು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಹಾಗಾಗಿ ಶೋಷಿತರ ಹಣ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ನೈತಿಕೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ರಾಜ್ಯದಲ್ಲಿ ಮುಖ್ಯಮಂತ್ರಿಗಳ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳು ಕಳೆದರೂ ಸೂಕ್ತ ರೀತಿಯ ಸಂಪುಟ ಪುನರ್ರಚನೆ ಮಾಡಲು ಸಾಧ್ಯವಾಗಿಲ್ಲ. ಸುದೀರ್ಘ ಸಮಯ ತೆಗೆದುಕೊಂಡರೂ ಸಹ ಕೊನೆಗೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರಿಗೆ ಸಂಪುಟದಲ್ಲಿ ಅವಕಾಶ ನೀಡಲಾಗಿದೆ. ಭ್ರಷ್ಟಾಚಾರ ಹಾಗೂ ಹಗರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇರುವ ಮುಖಂಡರಿಗೆ ಸಚಿವ ಸ್ಥಾನ ನೀಡಿರುವುದು ಖಂಡನೀಯ ಎಂದು ಕಿಡಿಕಾರಿದರು.
ಒಂದೆಡೆ ಬಿಜೆಪಿ ಶಾಸಕರು ಹಾಗೂ ನಾಯಕರು ಸದನದ ಒಳಗಡೆ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸಾರ್ವಜನಿಕರಿಗೆ ಸರ್ಕಾರದ ಭ್ರಷ್ಟಾಚಾರದ ಅರಿವು ಮೂಡಿಸಲು ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದೆ. ಮುಂದಿನ ದಿನಗಳಲ್ಲಿ ಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ, ಶಾಸಕರ ಹಾಗೂ ಸಂಸದರ ಚುನಾವಣೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ತಾತ್ಕಾಲಿಕ ಆಸೆ ಅಥವಾ ಹಣದ ಆಮಿಷಕ್ಕೆ ಒಳಗಾಗದೆ ದೇಶಭಕ್ತಿ, ಪ್ರಾಮಾಣಿಕತೆ ಹಾಗೂ ಸಮರ್ಥ ನಾಯಕತ್ವ ಹೊಂದಿರುವ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ವಾಲ್ಮೀಕಿ ನಿಗಮಕ್ಕೆ ಸೇರಿದ ಸುಮಾರು 187 ಕೋಟಿ ರೂಪಾಯಿ ಹಣವನ್ನು ಬಾರ್ಗಳಿಗೆ, ಆಂಧ್ರಪ್ರದೇಶ ಮತ್ತು ಹೈದರಾಬಾದ್ನ ವಿವಿಧ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿ, ಚುನಾವಣೆ ವೆಚ್ಚ ಹಾಗೂ ದುಂದುವೆಚ್ಚಕ್ಕೆ ಬಳಸಲಾಗಿದೆ. ಇಂತಹ ಅಕ್ರಮದ ರೂವಾರಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್, ಸೂರನಹಳ್ಳಿ ಶ್ರೀನಿವಾಸ್, ಮಾಜಿ ಅಧ್ಯಕ್ಷ ಮುರುಳಿ, ಕಾರ್ಯದರ್ಶಿಗಳಾದ ರೇಖಾ, ಚಂದ್ರು, ಜಿಲ್ಲಾ ಉಪಾಧ್ಯಕ್ಷ ಲಿಂಗರಾಜು, ಗ್ರಾಮಾಂತರ ಅಧ್ಯಕ್ಷ ನಾಗರಾಜು, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಸಹ ವಕ್ತಾರ ನವೀನ್ ಚಾಲುಕ್ಯ, ಎಸ್.ಸಿ. ಮೋರ್ಚಾ ಅಧ್ಯಕ್ಷ ಪರಶುರಾಮ್, ಯುವ ಮೋರ್ಚಾ ಅಧ್ಯಕ್ಷ ಆರುಣ್ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಧರಣಿಯಲ್ಲಿ ಭಾಗವಹಿಸಿದ್ದರು.



