August 18, 2026
Tuesday, August 18, 2026
spot_img

ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಆ್ಯಕ್ಷನ್: ಅಧಿಕಾರಿಗಳಿಗೆ ಸಚಿವ ರಘುಮೂರ್ತಿ ಖಡಕ್ ಸೂಚನೆ

ಹೊಸದಿಗಂತ ವರದಿ ಚಿತ್ರದುರ್ಗ:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಂಗಳೂರಿನ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.

ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಯಾವ ಯೋಜನೆ ಯಾವ ಹಂತದಲ್ಲಿದೆ, ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು.

ಇದನ್ನೂ ಓದಿ:

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ನೇರವಾಗಿ ಸಂಬಂಧಿಸಿರುವುದರಿಂದ ಅವುಗಳ ಅನುಷ್ಠಾನದಲ್ಲಿ ವಿಳಂಬವಾಗಬಾರದು ಎಂದು ಸಚಿವರು ಸ್ಪಷ್ಟಪಡಿಸಿದರು. ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ ಹಾಗೂ ಮೂಲಸೌಕರ್ಯ ಸೇರಿದಂತೆ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನದಲ್ಲಿ ಸಮನ್ವಯ ಮತ್ತು ವೇಗ ಅಗತ್ಯ ಎಂದು ಅವರು ಹೇಳಿದರು.

ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !