August 19, 2026
Wednesday, August 19, 2026
spot_img

ಕರ್ನಾಟಕದ ಬರಕ್ಕೆ ಕೇಂದ್ರದ ಸ್ಪಂದನೆ: ಸೆಪ್ಟೆಂಬರ್‌ನಲ್ಲಿ ರಾಜ್ಯಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ಕೃಷಿ ಸಮಸ್ಯೆಗಳ ಕುರಿತು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಯಾವುದಾದರೂ ಬರಪೀಡಿತ ಜಿಲ್ಲೆಗೆ ತೆರಳಿ ಪರಿಸ್ಥಿತಿ ಪರಿಶೀಲಿಸುವುದಾಗಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ.

ನರೇಂದ್ರಸ್ವಾಮಿ ಅವರು ದೆಹಲಿಗೆ ತೆರಳಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಪ್ರಧಾನ ಮಂತ್ರಿ ಫಸಲ್ ಭೀಮಾ ವಿಮಾ ಯೋಜನೆಯ ನೋಂದಣಿ ಅವಧಿ ವಿಸ್ತರಣೆ ಕುರಿತು ಚರ್ಚಿಸಿದರು.

ಫಸಲ್ ಭೀಮಾ ನೋಂದಣಿ ಅವಧಿ ವಿಸ್ತರಣೆಗೆ ಮನವಿ

ಪ್ರಧಾನ ಮಂತ್ರಿ ಫಸಲ್ ಭೀಮಾ ವಿಮಾ ಯೋಜನೆಗೆ ರೈತರು ನೋಂದಾಯಿಸಿಕೊಳ್ಳುವ ಅವಧಿಯನ್ನು ಆಗಸ್ಟ್ ಅಂತ್ಯದವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದ ವಿಚಾರವನ್ನು ನರೇಂದ್ರಸ್ವಾಮಿ ಅವರು ಕೇಂದ್ರ ಸಚಿವರ ಗಮನಕ್ಕೆ ತಂದರು.

ಬರಪೀಡಿತ ಜಿಲ್ಲೆಗಳಿಗೆ ಕೇಂದ್ರ ಸಚಿವರ ಭೇಟಿ

ಕರ್ನಾಟಕದಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಕೃಷಿ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಬರಪೀಡಿತ ಪ್ರದೇಶಗಳ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:

ಈಗಾಗಲೇ 666 ಕೃಷಿ ವಿಮಾ ಘಟಕಗಳಲ್ಲಿ ಮಧ್ಯಂತರ ಪರಿಹಾರ ನೀಡಲು ಆದೇಶಿಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜತೆಗೆ, ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರೈತರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ನರೇಂದ್ರಸ್ವಾಮಿ ಹೇಳಿದ್ದಾರೆ.

ಕಾವೇರಿ ನೀರು ವಿಚಾರದಲ್ಲಿ ಮಳೆಯೇ ಆಶ್ರಯ

ತಮಿಳುನಾಡಿಗೆ ನೀರು ಬಿಡುವ ಹಿನ್ನೆಲೆಯಲ್ಲಿ ರಾಜ್ಯದ ಕೃಷಿ ಚಟುವಟಿಕೆಗಳಿಗೆ ನೀರು ದೊರೆಯಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ನರೇಂದ್ರಸ್ವಾಮಿ, ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕೇವಲ 109 ಅಡಿಯಷ್ಟಿದೆ ಎಂದು ಹೇಳಿದರು.

ಪ್ರಸ್ತುತ ನೀರಿನ ಸಂಗ್ರಹ ರಾಜ್ಯದ ರೈತರಿಗೆ ಒಂದು ಬೆಳೆ ಬೆಳೆಯಲು ಕೂಡ ಸಾಕಾಗದ ಪರಿಸ್ಥಿತಿ ಇದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಈ ಸಂದರ್ಭದಲ್ಲಿ ಮಳೆಯೇ ಪ್ರಮುಖ ಆಶ್ರಯವಾಗಿದೆ ಎಂದು ಅವರು ತಿಳಿಸಿದರು.

ಲಭ್ಯವಿರುವ ನೀರಿನ ಪ್ರಮಾಣವನ್ನು ಆಧರಿಸಿ ಕೃಷಿ ಚಟುವಟಿಕೆಗಳಿಗೆ ನೀರು ಬಿಡುವ ಕುರಿತು ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ನರೇಂದ್ರಸ್ವಾಮಿ ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !