ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಜಾಗದ ಹುಡುಕಾಟ ತೀವ್ರಗೊಂಡಿದೆ. ಆದರೆ, ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಸದ್ಯಕ್ಕೆ ಇಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ತುಮಕೂರು ಹೆಸರು ಕೈಬಿಡಲು ಕಾರಣವೇನು?
ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಮತ್ತು ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರು ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಬೇಕೆಂದು ಒತ್ತಾಯಿಸುತ್ತಿದ್ದರು. ಆದರೆ, ಶಾಸಕ ಜ್ಯೋತಿ ಗಣೇಶ್ ಜಿ.ಬಿ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ‘ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನೀತಿ 2008’ ರ ಪ್ರಕಾರ, ಈಗಿರುವ ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್ ವ್ಯಾಪ್ತಿಯೊಳಗೆ ಮತ್ತೊಂದು ಹೊಸ ವಿಮಾನ ನಿಲ್ದಾಣಕ್ಕೆ ಸಾಮಾನ್ಯವಾಗಿ ಅನುಮತಿ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳು ಗುರುತು:
ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಸರ್ಕಾರ ಈಗಾಗಲೇ ಮೂರು ಸಂಭಾವ್ಯ ಸ್ಥಳಗಳನ್ನು ಗುರುತಿಸಿದ್ದು, ತಾಂತ್ರಿಕ ಅಧ್ಯಯನಕ್ಕಾಗಿ ತಜ್ಞರನ್ನು ನೇಮಿಸಿದೆ. ಆ ಮೂರು ಪ್ರಮುಖ ಸ್ಥಳಗಳೆಂದರೆ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ರಸ್ತೆಯಲ್ಲಿರುವ ಸೋಮನಹಳ್ಳಿ, ಕನಕಪುರ ರಸ್ತೆಯಲ್ಲೇ ಇರುವ ಚೂಡಹಳ್ಳಿ, ನೆಲಮಂಗಲ ಸಮೀಪದ ಗೂಡಮಾರನಹಳ್ಳಿ. ಇವುಗಳ ಜತೆಗೆ ಬೆಂಗಳೂರು ದಕ್ಷಿಣದ ಹರೊಹಳ್ಳಿ ಪ್ರದೇಶದಲ್ಲೂ ಸೂಕ್ತ ಜಾಗಕ್ಕಾಗಿ ಪರಿಶೀಲನೆ ಮತ್ತು ತಪಾಸಣೆ ಕಾರ್ಯಗಳು ನಡೆಯುತ್ತಿವೆ ಎಂದು ಸರ್ಕಾರ ತಿಳಿಸಿದೆ.



