ಹೊಸದಿಗಂತ ವರದಿ ಬೆಳಗಾವಿ:
ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದಲ್ಲಿ ನಡೆದಿದೆ.
ಅವನ್ನಾ ಸಿದ್ದಪ್ಪ ತಪಶಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಕೆ. ವಾಲಿಕರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ, ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಪತ್ತೆಯಾಗಿದೆ.
ದಾಳಿಯ ವೇಳೆ ಸುಮಾರು 13 ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಬಂಧಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ:
ಈ ಸಂಬಂಧ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಬೆಳೆಸಲು ಕಾರಣ, ಇದರ ಹಿಂದೆ ಯಾರಾದರೂ ಇತರರು ಇದ್ದಾರೆಯೇ ಹಾಗೂ ಈ ಕೃತ್ಯಕ್ಕೆ ಸಂಬಂಧಿಸಿದ ಇತರೆ ಮಾಹಿತಿಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ತನಿಖೆಯ ಬಳಿಕ ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.



