ಹೊಸದಿಗಂತ ವರದಿ ಕಲಬುರಗಿ:
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಎಸ್ಆರ್ಟಿಸಿ ಬಸ್ನಲ್ಲಿ ವಿದ್ಯಾರ್ಥಿಯಿಂದ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಕಂಡಕ್ಟರ್ ಸಿದ್ದಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಕರ್ತವ್ಯ ಲೋಪದ ಆರೋಪದಡಿ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿ (ಡಿಸಿ) ಅಮಾನತು ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 18ರಂದು ಕಲಬುರಗಿ–ಕಾಳಗಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಕಂಡಕ್ಟರ್ ಸಿದ್ದಪ್ಪ ಅವರು ವಿದ್ಯಾರ್ಥಿಯೊಬ್ಬನಿಗೆ ಇಟಿಎಂ (ETM) ಯಂತ್ರ ನೀಡಿ ಪ್ರಯಾಣಿಕರಿಗೆ ಟಿಕೆಟ್ ವಿತರಣೆ ಮಾಡಿಸಿದ್ದರು. ವಿದ್ಯಾರ್ಥಿ ಪ್ರಯಾಣಿಕರಿಗೆ ಟಿಕೆಟ್ ನೀಡುತ್ತಿರುವ ದೃಶ್ಯವನ್ನು ಕೆಲವರು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆದಿತ್ತು. ಘಟನೆ ಬಗ್ಗೆ ಕೆಎಸ್ಆರ್ಟಿಸಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿದ್ದಾರೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಕಂಡಕ್ಟರ್ ಸಿದ್ದಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಸಿಬ್ಬಂದಿಗೆ ಸೂಚನೆ
ಘಟನೆಗೆ ಸಂಬಂಧಿಸಿದಂತೆ ಇಲಾಖೆಯು ಮುಂದಿನ ಕ್ರಮ ಕೈಗೊಂಡಿದ್ದು, ಕರ್ತವ್ಯದ ವೇಳೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.



