ಹೊಸದಿಗಂತ ವರದಿ ಮುಂಡಗೋಡ:
ತಾಲೂಕಿನ ಟಿಬೆಟಿಯನ್ ಕಾಲೋನಿಯ ಲಾಮಾ ಕ್ಯಾಂಪ್ ನಂ.1ರಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಬಸಾಪುರ ಗ್ರಾಮದ ಸಂದೇಶ ನಾಗರಾಜ ಚಲವಾದಿ (23) ಮೃತ ಯುವಕ. ಕಟ್ಟಡ ಕಾಮಗಾರಿ ವೇಳೆ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೆಳಗೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.
ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆ:
ಟಿಬೇಟಿಯನ್ ಕಾಲೋನಿಯಲ್ಲಿ ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆಯೇ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಸುರಕ್ಷತಾ ಜಾಲ, ರಕ್ಷಣಾ ಸಾಧನಗಳು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಕಾರ್ಮಿಕರ ಜೀವಕ್ಕೆ ಅಪಾಯವಾಗದಂತೆ ಸಂಬಂಧಪಟ್ಟವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:
ಇತ್ತೀಚೆಗಷ್ಟೇ ಮತ್ತೊಂದು ಸಾವು:
ಟಿಬೇಟಿಯನ್ ಕಾಲೋನಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಕಾರ್ಮಿಕ ಮೃತಪಟ್ಟಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಮಂಜುನಾಥ ಮಾದರ ಎಂಬ ಕಾರ್ಮಿಕ ಎರಡನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದರು. ಇದೀಗ ಮತ್ತೆ ನಾಲ್ಕನೇ ಮಹಡಿಯಿಂದ ಬಿದ್ದು ಯುವ ಕಾರ್ಮಿಕ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.



