August 24, 2026
Monday, August 24, 2026
spot_img

ಪೊಲೀಸ್ ಸರ್ಪಗಾವಲಿನಲ್ಲಿ ಪುತ್ತೂರು: ಈದ್ ಮಿಲಾದ್ ಹಿನ್ನೆಲೆ ಕಟ್ಟುನಿಟ್ಟಿನ ಭದ್ರತೆ, ಪಥಸಂಚಲನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಎಡಿಶನಲ್ ಎಸ್ಪಿ (01), ಡಿವೈಎಸ್ ಪಿ (01). ಪಿಎಸ್ ಐ (08), ಎಎಸ್ ಐ (10). ಸಿಬ್ಬಂದಿಗಳು (50), ಕೆಎಸ್ ಆರ್ ಪಿ ತುಕಡಿ (05), ಡಿಎಆರ್ ತುಕಡಿ (03), ಎಸ್ ಎಫ್ ತುಕಡಿ (01) ಯನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಹಾಗೂ ಭದ್ರತಾ ಭಾವನೆ ಬೆಳೆಸುವ ಉದ್ದೇಶದಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಪೊಲೀಸ್ ಪಥಸಂಚಲನ ನಡೆಸಲಾಯಿತು.

ಹಬ್ಬದ ದಿನ ಸಾಮಾನ್ಯವಾಗಿ ಬಹುತೇಕ ಅಂಗಡಿಗಳು ಸ್ವಯಂಪ್ರೇರಿತವಾಗಿ ಮುಚ್ಚಿರುತ್ತವೆ. ಆದರೆ ಯಾವುದೇ ಅಂಗಡಿ ಅಥವಾ ವಾಣಿಜ್ಯ ಸಂಸ್ಥೆಗಳನ್ನು ಬಲವಂತವಾಗಿ ಬಂದ್ ಮಾಡಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ವದಂತಿಗಳಿಗೆ ಕಿವಿಗೊಡದಂತೆ ಮನವಿ

ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ತನಿಖೆಯೂ ಮುಂದುವರಿದಿದೆ. ಆದರೆ ಪ್ರಕರಣವನ್ನು ಪೊಲೀಸರು ಲಘುವಾಗಿ ಪರಿಗಣಿಸುತ್ತಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದು, ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಈ ಹಿಂದೆಯೂ ಹಲವು ಪ್ರಕರಣಗಳಲ್ಲಿ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವವನ್ನು ಪರಿಗಣಿಸದೆ ಕಾನೂನು ಪ್ರಕಾರ ನೋಟಿಸ್ ಹಾಗೂ ಇತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ, ಪ್ರಕರಣದ ತನಿಖೆಯ ಕುರಿತು ಯಾರಿಗಾದರೂ ಯಾವುದೇ ಅನುಮಾನ ಅಥವಾ ಚರ್ಚೆಯ ಅಗತ್ಯವಿದ್ದರೆ, ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಮುಕ್ತವಾಗಿ ಮಾಹಿತಿ ಪಡೆಯಬಹುದು ಎಂದು ಕೂಡಾ ಪೊಲೀಸರು ತಿಳಿಸಿದ್ದಾರೆ.

ಶಾಂತಿ ಕಾಪಾಡಲು ಸಹಕರಿಸುವಂತೆ ಮನವಿ

ಈದ್ ಮಿಲಾದ್ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪುತ್ತೂರು ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ. ಯಾವುದೇ ವದಂತಿಗಳನ್ನು ನಂಬದೆ, ಸಾಮಾಜಿಕ ಜಾಲತಾಣಗಳಲ್ಲಿ ಪರಿಶೀಲಿಸದ ಮಾಹಿತಿಯನ್ನು ಹಂಚಿಕೊಳ್ಳದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !