ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕರಡು ಮತದಾರರ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಹಲವು ಆತಂಕಗಳನ್ನು ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 1.07 ಕೋಟಿಗೂ ಅಧಿಕ ಮತದಾರರನ್ನು ASD ವ್ಯಾಪ್ತಿಗೆ ಗುರುತಿಸಿರುವ ಹಿನ್ನೆಲೆಯಲ್ಲಿ, ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನೋಟಿಸ್ ಪಡೆದವರಿಗೆ ಹೆಚ್ಚಿನ ಕಾಲಾವಕಾಶ
ASD ಎಂದು ಗುರುತಿಸಲಾಗಿರುವ ಮತದಾರರ ಪೈಕಿ ಸುಮಾರು 43 ಲಕ್ಷ ಮಂದಿಗೆ ನೋಟಿಸ್ ನೀಡಲಾಗುತ್ತಿದೆ. ಈ ನೋಟಿಸ್ಗಳಿಗೆ ಪ್ರತಿಕ್ರಿಯಿಸಲು ಕನಿಷ್ಠ 3ರಿಂದ 4 ವಾರಗಳ ಕಾಲಾವಕಾಶ ನೀಡಬೇಕು ಎಂದು ಡಿ.ಕೆ. ಶಿವಕುಮಾರ್ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಬರೆದಿರುವ ಎರಡು ಪುಟಗಳ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ:
ಮತದಾನದ ಹಕ್ಕು ಕಸಿದುಕೊಳ್ಳಬಾರದು
SIR ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿಯಬಾರದು ಎಂಬುದು ತಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಮತದಾರರಿಗೆ ತಮ್ಮ ದಾಖಲೆಗಳನ್ನು ಸಲ್ಲಿಸಲು ಮತ್ತು ಆಕ್ಷೇಪಣೆಗಳನ್ನು ದಾಖಲಿಸಲು ಸಾಕಷ್ಟು ಸಮಯ ಒದಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.



