August 27, 2026
Thursday, August 27, 2026
spot_img

ಬುಡಾ ಅಧ್ಯಕ್ಷರಾಗಿ ಶಾಸಕ ಆಸೀಫ್ ಸೇಠ್ ಅಧಿಕಾರ ಸ್ವೀಕಾರ: ಕಣಬರ್ಗಿ ಲೇಔಟ್ ಅಭಿವೃದ್ಧಿಗೆ ಮೊದಲ ಆದ್ಯತೆ

ಹೊಸದಿಗಂತ ವರದಿ ಬೆಳಗಾವಿ:

ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕಣಬರ್ಗಿ ವಸತಿ ವಿನ್ಯಾಸ ಸೇರಿದಂತೆ ಬೆಳಗಾವಿ ನಗರಾಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಉತ್ತರ ಮತಕ್ಷೇತ್ರದ ಶಾಸಕ ಹಾಗೂ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ನೂತನ ಅಧ್ಯಕ್ಷ ಆಸೀಫ್ ಸೇಠ್ ಹೇಳಿದರು.

ಗುರುವಾರ ಬುಡಾ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಣಬರ್ಗಿ ಲೇಔಟ್ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜತೆಗೆ ನಗರದಲ್ಲಿ ಐಟಿ ಪಾರ್ಕ್ ನಿರ್ಮಾಣಕ್ಕೂ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ನಗರದಲ್ಲಿ ತಲೆ ಎತ್ತುತ್ತಿರುವ ಅನಧಿಕೃತ ಲೇಔಟ್‌ಗಳ ಬಗ್ಗೆಯೂ ಗಮನ ಹರಿಸಲಾಗುವುದು. ಕಾನೂನುಬಾಹಿರವಾಗಿ ನಿರ್ಮಾಣಗೊಳ್ಳುತ್ತಿರುವ ಅನಧಿಕೃತ ಲೇಔಟ್‌ಗಳ ವಿರುದ್ಧ ಸಾರ್ವಜನಿಕ ಹಿತದೃಷ್ಟಿಯಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು.

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ

ಸಹಜವಾಗಿಯೇ ಅಲ್ಪಸಂಖ್ಯಾತರ ಕೋಟಾದಡಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ, ಇದೀಗ ಬುಡಾ ಅಧ್ಯಕ್ಷ ಸ್ಥಾನ ದೊರೆತಿದ್ದು, ಈ ಅವಕಾಶ ನೀಡಿದ ಪಕ್ಷದ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಗರದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಶಾಕಸ ಆಸೀಫ್‌ ಸೇಠ್ ಹೇಳಿದರು.

 ‌ಈ ವೇಳೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕ ಫಿರೋಜ್ ಸೇಠ್, ಬುಡಾ ಆಯುಕ್ತರು ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.‌

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !