ಹೊಸದಿಗಂತ ವರದಿ ಶಿವಮೊಗ್ಗ:
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕಾಸ್ಪೋಡಿಯಲ್ಲಿ ನಡೆದಿದೆ.
ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 48 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸಾಗರ ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ಬಸ್ನಲ್ಲಿ ಆನಂದಪುರಕ್ಕೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಕಾಸ್ಪೋಡಿ ಕೆರೆಯ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ 10 ವಿದ್ಯಾರ್ಥಿಗಳು ಹಾಗೂ ಓರ್ವ ಉಪನ್ಯಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇತರೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:
ಗಾಯಾಳುಗಳನ್ನು ತಕ್ಷಣ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ತುರ್ತು ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ರವಿಶಂಕರ್ ಹಾಗೂ ಉಪನ್ಯಾಸಕರಾದ ಭಾಸ್ಕರ್, ಜಗನ್ನಾಥ್ ಮತ್ತು ಉಮೇಶ್ ಸೇರಿದಂತೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದರು.



