August 29, 2026
Saturday, August 29, 2026
spot_img

ಮಳೆ ಕೊರತೆ, ಬೆಳೆ ನಷ್ಟವಾಗಿದ್ದರೂ ಯಾದಗಿರಿ ಕಡೆಗಣನೆ: ಸರ್ಕಾರದ ವಿರುದ್ಧ ಶಾಸಕ ಶರಣಗೌಡ ಕಂದಕೂರ ಕಿಡಿ

ಹೊಸದಿಗಂತ ವರದಿ ಯಾದಗಿರಿ:

ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ, ಬೆಳೆ ನಷ್ಟದ ನಡುವೆಯೂ ಯಾದಗಿರಿ ಹಾಗೂ ಗುರುಮಠಕಲ್ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ಶಾಸಕ ಶರಣಗೌಡ ಕಂದಕೂರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ನೀಡಿರುವ ವರದಿಗಳಲ್ಲಿಯೇ ಯಾದಗಿರಿ ಮತ್ತು ಗುರುಮಠಕಲ್ ತಾಲೂಕುಗಳಲ್ಲಿ ಮಳೆ ಕೊರತೆ ಹೆಚ್ಚಿರುವುದಾಗಿ ಉಲ್ಲೇಖಿಸಲಾಗಿದೆ. ಆದರೂ ಕೇವಲ ಒಂದು ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಯಾವ ಮಾನದಂಡದ ಆಧಾರದಲ್ಲಿ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕುಎಂದು ಅವರು ಆಗ್ರಹಿಸಿದರು.

ಯಾದಗಿರಿ ಜಿಲ್ಲೆಯಲ್ಲಿ ಆರು ತಾಲೂಕುಗಳಿವೆ. ಅದರಲ್ಲಿ ಒಂದು ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಆದರೆ ಉಳಿದ ತಾಲೂಕುಗಳಲ್ಲಿಯೂ ರೈತರು ಸಂಕಷ್ಟದಲ್ಲಿದ್ದಾರೆ. ವಿಶೇಷವಾಗಿ ಯಾದಗಿರಿ, ಗುರುಮಠಕಲ್, ಶಹಾಪುರ ಹಾಗೂ ಸುರಪುರ ಭಾಗಗಳು ನೀರಾವರಿ ಸೌಲಭ್ಯ ಕಡಿಮೆ ಇರುವ ಪ್ರದೇಶಗಳಾಗಿದ್ದು, ಬಹುತೇಕ ರೈತರು ಮಳೆಯನ್ನೇ ಅವಲಂಬಿಸಿದ್ದಾರೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !