ಹೊಸದಿಗಂತ ಡಿಜಿಟಲ್ ಡೆಸ್ಕ್:
ಫುಕೆಟ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ 1.07 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಆರೋಪದ ಮೇಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಈ ಕುರಿತು ಬೆಂಗಳೂರು ಕಸ್ಟಮ್ಸ್ ಇಲಾಖೆಯು ಸಾಮಾಜಿಕ ಜಾಲತಾಣ ‘X’ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೆಪ್ಟೆಂಬರ್ 1ರಂದು ಘಟನೆ ನಡೆದಿದೆ. ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ತಡೆದು ಪರಿಶೀಲನೆ ನಡೆಸಿದಾಗ ಮಾದಕ ವಸ್ತು ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಅಧಿಕಾರಿಗಳ ಪ್ರಕಾರ, ಫುಕೆಟ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಹೈಡ್ರೋಪೋನಿಕ್ ಗಾಂಜಾವನ್ನು ಅಡಗಿಸಿಟ್ಟು ಸಾಗಿಸಲಾಗುತ್ತಿತ್ತು.
ತಪಾಸಣೆ ವೇಳೆ ಒಟ್ಟು 3.05 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ1.07 ಕೋಟಿ ರೂ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತುವನ್ನು ಕಾನೂನು ಪ್ರಕಾರ ಜಪ್ತಿ ಮಾಡಲಾಗಿದ್ದು, ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.



