ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಶನಿವಾರ ತಡರಾತ್ರಿ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಉಳಿದ ಜೀವ
ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ನಲ್ಲಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ ರಸ್ತೆಯ ಎರ್ಮಾಯಿ ಎಂಬಲ್ಲಿ ತಲುಪಿದಾಗ ಈ ಘಟನೆ ನಡೆದಿದೆ. ಬಸ್ ಚಲಿಸುತ್ತಿದ್ದಾಗಲೇ ಇಂಜಿನ್ ಭಾಗದಿಂದ ದಟ್ಟ ಹೊಗೆ ಮತ್ತು ಬೆಂಕಿಯ ಜ್ವಾಲೆಗಳು ಬರುತ್ತಿರುವುದನ್ನು ಗಮನಿಸಿದ ಚಾಲಕ. ತಕ್ಷಣವೇ ಬಸ್ ಅನ್ನು ರಸ್ತೆ ಬದಿಗೆ ನಿಲ್ಲಿಸಿ, ಪ್ರಯಾಣಿಕರೆಲ್ಲರಿಗೂ ತಕ್ಷಣ ಕೆಳಗೆ ಇಳಿಯುವಂತೆ ಕೂಗಿದ್ದಾರೆ. ಚಾಲಕ ಹಾಗೂ ನಿರ್ವಾಹಕನ ಈ ಎಚ್ಚರಿಕೆಯಿಂದಾಗಿ ಎಲ್ಲಾ 37 ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ.
ಇದನ್ನೂ ಓದಿ:
ಸಂಪೂರ್ಣ ಸುಟ್ಟು ಭಸ್ಮವಾದ ಬಸ್
ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು, ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದು ಭಸ್ಮವಾಗಿದೆ. ಘಟನೆಯ ಬೆನ್ನಲ್ಲೇ ಬಸ್ ಸಿಬ್ಬಂದಿ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇಡೀ ಬಸ್ ಬೆಂಕಿಗಾಹುತಿಯಾದರೂ ಪ್ರಯಾಣಿಕರ ಜೀವ ಉಳಿಸಿದ ಚಾಲಕನ ಸಾಹಸಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.



