ಹೊಸದಿಗಂತ ಡಿಜಿಟಲ್ ಡೆಸ್ಕ್:
400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಸಾಹುಕಾರ್ ಎಸ್. ಶಿವಶಂಕರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.
ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ಕಳೆದುಹೋಗುತ್ತಿದೆ
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ನೇಮಕಾತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂತಹ ಅಕ್ರಮಗಳು ನಡೆಯುವುದರಿಂದ ಜನರು ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ಶಿವಶಂಕರಪ್ಪ ಅವರಿಗೆ ಬಂಧನದಿಂದ ಪೂರ್ವ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.
OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ಆರೋಪ
ಪ್ರಕರಣದಲ್ಲಿ ಕೆಲವು KPSC ಅಧಿಕಾರಿಗಳ ಸಂಬಂಧಿಕರಿಗೆ ಅಸಹಜವಾಗಿ ಹೆಚ್ಚಿನ ಅಂಕ ನೀಡಲಾಗಿದೆ, ಕೆಲ ಅಭ್ಯರ್ಥಿಗಳಿಗೆ ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಲಭ್ಯವಾಗಿತ್ತು ಹಾಗೂ OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ಮಾಡಲಾಗಿದೆ ಎಂಬ ಆರೋಪಗಳಿವೆ.
ಇದನ್ನೂ ಓದಿ:
ಶಿವಶಂಕರಪ್ಪ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 318ರಡಿ ವಂಚನೆ ಹಾಗೂ ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳ (ಭ್ರಷ್ಟಾಚಾರ ಮತ್ತು ಅನ್ಯಾಯ ವಿಧಾನಗಳ ತಡೆ) ಕಾಯ್ದೆ, 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮಧ್ಯವರ್ತಿಗಳು 70ರಿಂದ 80 ಲಕ್ಷ ರೂ ಪಡೆದು OMR ಅಂಕಗಳನ್ನು ಬದಲಾಯಿಸಿ ಸರ್ಕಾರಿ ಹುದ್ದೆ ಕೊಡಿಸುವುದಾಗಿ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದರು ಎಂಬ ಆರೋಪವೂ ತನಿಖೆಯಲ್ಲಿದೆ.



