September 8, 2026
Tuesday, September 8, 2026
spot_img

ಹಾಸನ–ಬೇಲೂರು ಚತುಷ್ಪಥ ಹೆದ್ದಾರಿಗೆ ಕೇಂದ್ರ ಅಸ್ತು: 470.85 ಕೋಟಿ ರೂ. ಅನುಮೋದನೆ

ಹೊಸದಿಗಂತ ವರದಿ ಹಾಸನ:

ಹಾಸನ ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿದ್ದ ಹಾಸನ–ಬೇಲೂರು ರಾಷ್ಟ್ರೀಯ ಹೆದ್ದಾರಿ 373ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಒಟ್ಟು 29.54 ಕಿ.ಮೀ. ಉದ್ದದ ರಸ್ತೆ ಭಾಗವನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 470.85 ಕೋಟಿ ಪರಿಷ್ಕೃತ ಮೊತ್ತಕ್ಕೆ ಆಡಳಿತಾತ್ಮಕ, ತಾಂತ್ರಿಕ ಹಾಗೂ ಆರ್ಥಿಕ ಅನುಮೋದನೆ ನೀಡಿದೆ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ತಿಳಿಸಿದ್ದಾರೆ.

ಹಾಸನ–ಬೇಲೂರು ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳುವಂತೆ ಸಂಸದರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದರು. ಬಳಿಕ ಸಚಿವಾಲಯ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಒತ್ತಾಯಿಸಿದ್ದರು.

ರಾಷ್ಟ್ರೀಯ ಹೆದ್ದಾರಿ 373ರ ವಿನ್ಯಾಸ ಸರಪಳಿ ಕಿ.ಮೀ. 27.780ರಿಂದ ಕಿ.ಮೀ. 57.320ರವರೆಗಿನ 29.54 ಕಿ.ಮೀ. ರಸ್ತೆ ಭಾಗವನ್ನು ಚತುಷ್ಪಥಗೊಳಿಸಲು ಇದೀಗ ಅನುದಾನ ಮಂಜೂರಾಗಿದೆ. ಯೋಜನೆಯನ್ನು EPC ಮಾದರಿಯಲ್ಲಿ NH(O) ವಾರ್ಷಿಕ ಯೋಜನೆ 2022-23ರ ಪ್ಯಾಕೇಜ್-11ರ ಅಡಿಯಲ್ಲಿ ಅನುಷ್ಠಾನಗೊಳಿಸಲಾಗುತ್ತದೆ.

ಪರಿಷ್ಕೃತ ಯೋಜನೆಯಲ್ಲಿ ಭೂಸ್ವಾಧೀನಕ್ಕಾಗಿ 115.30 ಕೋಟಿ ಹಾಗೂ ಭೂಸ್ವಾಧೀನ ಸೇರಿದಂತೆ ಪೂರ್ವ ನಿರ್ಮಾಣ ಚಟುವಟಿಕೆಗಳಿಗೆ 128.90 ಕೋಟಿ ಮೀಸಲಿಡಲಾಗಿದೆ. ರಾಜ್ಯ ಲೋಕೋಪಯೋಗಿ ಇಲಾಖೆ ಭೂಸ್ವಾಧೀನ ಪರಿಹಾರ ವಿತರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, 2026ರ ಅಕ್ಟೋಬರ್ 31ರೊಳಗೆ ಕಾಮಗಾರಿ ಆರಂಭದ ದಿನಾಂಕವನ್ನು ಅಂತಿಮಗೊಳಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ.

ಕಾಮಗಾರಿಯನ್ನು 2029-30ನೇ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿದೆ. ಯೋಜನೆ ಪೂರ್ಣಗೊಂಡ ಬಳಿಕ ಹಾಸನ–ಬೇಲೂರು ನಡುವಿನ ಸಂಚಾರ ಮತ್ತಷ್ಟು ಸುಗಮವಾಗಲಿದ್ದು, ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ 470.85 ಕೋಟಿ ಅನುದಾನಕ್ಕೆ ಅನುಮೋದನೆ ನೀಡಿರುವ ಕೇಂದ್ರ ಸರ್ಕಾರ ಹಾಗೂ ಸಚಿವ ನಿತಿನ್ ಗಡ್ಕರಿ ಅವರಿಗೆ ಸಂಸದ ಶ್ರೇಯಸ್ ಪಟೇಲ್ ಧನ್ಯವಾದ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !