September 8, 2026
Tuesday, September 8, 2026
spot_img

ಸಿಎಂ ಭೇಟಿ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಯಶವಂತಪುರ ಮಾರುಕಟ್ಟೆಯಲ್ಲಿ 19 ಬಾಲ ಕಾರ್ಮಿಕರ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಸಿಎಂ ಶಿವಕುಮಾರ್, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ರೈತರು, ಕಾರ್ಮಿಕರು ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಕೆಲವು ಅಂಗಡಿಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ತಕ್ಷಣ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸಿಎಂ ಸೂಚನೆಯ ಬಳಿಕ ಉತ್ತರ ವಿಭಾಗದ ಡಿಸಿಪಿ ಮೇಲ್ವಿಚಾರಣೆಯಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಎಸಿಪಿಗಳು, ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡಗಳು ಮಾರುಕಟ್ಟೆಯ ವಿವಿಧ ಭಾಗಗಳಲ್ಲಿ ತಪಾಸಣೆ ನಡೆಸಿ ಮಕ್ಕಳನ್ನು ರಕ್ಷಿಸಿವೆ.

ರಕ್ಷಿಸಲಾದ 19 ಮಕ್ಕಳ ಪೈಕಿ ಬಿಹಾರದ 13 ಮಂದಿ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ತಲಾ ಇಬ್ಬರು ಹಾಗೂ ರಾಜಸ್ಥಾನ ಮತ್ತು ಕರ್ನಾಟಕದ ತಲಾ ಒಬ್ಬರು ಇದ್ದಾರೆ. ಬಿಹಾರದಿಂದ ರಕ್ಷಿಸಲಾದವರಲ್ಲಿ ಓರ್ವ ಬಾಲಕಿಯೂ ಇದ್ದಾಳೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಂಸಿ ಯಾರ್ಡ್ ಪೊಲೀಸರು ಬಾಲ ಕಾರ್ಮಿಕ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯಡಿ ಅಂಗಡಿ ಮಾಲೀಕರ ವಿರುದ್ಧ ನಾಲ್ಕು ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಬಾಲ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986ರಡಿ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !