ಹೊಸದಿಗಂತ ಡಿಜಿಟಲ್ ಡೆಸ್ಕ್:
‘ವಂದೇ ಮಾತರಂ’ ಗಾಯನದ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಜಟಾಪಟಿ ಮುಂದುವರಿದಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಅಧಿಕೃತ ಸಮಾರಂಭಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಿದರೆ ಸಾಕು ಎಂದು ಸರ್ಕಾರ ಸೂಚಿಸಿದೆ.
ಇದನ್ನೂ ಓದಿ:
ಕೇಂದ್ರ ಸರ್ಕಾರ ದ ಪ್ರಾತಿನಿಧ್ಯವಿರುವ ಕಾರ್ಯಕ್ರಮಗಳಲ್ಲಿ ಪೂರ್ತಿ ಹಾಡು
ಆದರೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಗು ಕೇಂದ್ರ ಸರ್ಕಾರ ದ ಪ್ರಾತಿನಿಧ್ಯವಿರುವ ಕಾರ್ಯಕ್ರಮಗಳಲ್ಲಿ ಕೇಂದ್ರದ ನಿಯಮದಂತೆ ‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು ಹಾಡಲು ಅವಕಾಶವಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಸೆಪ್ಟೆಂಬರ್ 8ರಂದು ರಾಜ್ಯಪಾಲರ ಹೆಸರಿನಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲೇಖಿಸಿರುವ ರಾಜ್ಯ ಸರ್ಕಾರ, ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಗಾಯನ ಅಥವಾ ವಾದನಕ್ಕೆ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರ ಕಾಯ್ದುಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದೆ.



