ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತ ಗಣನೀಯವಾಗಿ ಕ್ಷೀಣಿಸಿದೆ. ಇದರ ಪರಿಣಾಮವಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದು ಮತ್ತು ನಾಳೆ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಇಂದು ಕೆಲವೆಡೆ ಸಾಧಾರಣ ಮಳೆ
ಇಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರವಾದ ಮಳೆಯಾಗಬುದು ಎಂದು ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಹಗುರ ಮಳೆ
ಇನ್ನು, ನಾಳೆ ಕೂಡ ಕರಾವಳಿ ಭಾಗದಲ್ಲಿ ಹಗುರ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದಾಖಲಾದ ಮಳೆ
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡ ಹಿನ್ನೆಲೆಯಲ್ಲಿ ಗುರುವಾರ ಸಂಜೆಯವರೆಗೆ ಕೆಲವು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರಿನ ಕಳಸದಲ್ಲಿ ಗರಿಷ್ಠ 3 ಸೆಂ.ಮೀ ಮಳೆ ದಾಖಲಾಗಿದೆ. ಉಳಿದಂತೆ ಉತ್ತರ ಕನ್ನಡದ ನೀಲ್ಕುಂದ, ಧಾರವಾಡದ ಹುಬ್ಬಳ್ಳಿ ಹಾಗೂ ಕೊಡಗಿನ ಸಂತಹಳ್ಳಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿ, ಉಡುಪಿಯ ಸಿದ್ದಾಪುರ ಹಾಗೂ ಶಿವಮೊಗ್ಗದ ಕೊಣಂದೂರು ಮತ್ತು ಹುಂಚದಕಟ್ಟೆಯಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ.



