September 12, 2026
Saturday, September 12, 2026
spot_img

ಗಣೇಶೋತ್ಸವಕ್ಕೆ ನಿಯಮಗಳ ಕಿರಿಕಿರಿ: ಮಾರ್ಗಸೂಚಿ ಸರಳಗೊಳಿಸಲು ಗೃಹ ಸಚಿವರಿಗೆ ಶಾಸಕ ರಾಮಮೂರ್ತಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿ ಹಾಗೂ ನಿಬಂಧನೆಗಳನ್ನು ಸರಳಗೊಳಿಸುವಂತೆ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ. ರಾಮಮೂರ್ತಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪೊಲೀಸ್ ಸಿಬ್ಬಂದಿಯಿಂದಲೂ ತೊಂದರೆ

ಈ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದಿರುವ ಶಾಸಕ ರಾಮಮೂರ್ತಿ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆಗೆ ಸಂಬಂಧಿಸಿದಂತೆ ವಿವಿಧ ಮಾರ್ಗಸೂಚಿ ಮತ್ತು ನಿಬಂಧನೆಗಳಿಂದ ಸಾರ್ವಜನಿಕರು ಹಾಗೂ ಗಣೇಶೋತ್ಸವ ಆಯೋಜಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ಪೊಲೀಸ್ ಸಿಬ್ಬಂದಿಯಿಂದಲೂ ತೊಂದರೆಗಳು ಉಂಟಾಗುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಾರ್ಗಸೂಚಿ ಸಡಿಲಗೊಳಿಸಿ

ಸಾರ್ವಜನಿಕರ ಧಾರ್ಮಿಕ ಭಾವನೆಗಳು ಹಾಗೂ ಸಾಂಪ್ರದಾಯಿಕ ಆಚರಣೆಗಳಿಗೆ ಅನುಕೂಲವಾಗುವಂತೆ ಗಣೇಶೋತ್ಸವಕ್ಕೆ ಸಂಬಂಧಿಸಿದ ಮಾರ್ಗಸೂಚಿ ಮತ್ತು ನಿಬಂಧನೆಗಳನ್ನು ಸಡಿಲಗೊಳಿಸಬೇಕು. ಸರಳ ಹಾಗೂ ಜನಸ್ನೇಹಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಮಮೂರ್ತಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಅದೇ ರೀತಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅಗತ್ಯ ಸಹಕಾರ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಈ ಮೂಲಕ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಗತ್ಯ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಕೂಡಾ ಅವರು ಒತ್ತಾಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !