September 13, 2026
Sunday, September 13, 2026
spot_img

ಮಳೆಯೂ ಇಲ್ಲ, ಕಾಲುವೆಯಲ್ಲೂ ನೀರಿಲ್ಲ: ಕೊನೆಗೆ ಜೀವ ಪಣಕ್ಕಿಟ್ಟು ಟವರ್ ಏರಿದ ರೈತ

ಹೊಸದಿಗಂತ ವರದಿ ಬೆಳಗಾವಿ:

ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರೊಬ್ಬರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಬಂಡು ಚವ್ಹಾಣ್ ಅವರು ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಟವರ್ ಏರಿ ಕುಳಿತು ಪ್ರತಿಭಟನೆ ನಡೆಸಿದರು. ಮಳೆ ಕೈಕೊಟ್ಟಿರುವ ಸಂದರ್ಭದಲ್ಲಿ ಕಾಲುವೆ ಮೂಲಕವೂ ನೀರು ಹರಿಯದ ಕಾರಣ ಬೆಳೆಗಳಿಗೆ ನೀರಿನ ಕೊರತೆ ಎದುರಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿ ಬಂಡು ಚವ್ಹಾಣ್ ಅವರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.


ರೈತ ಟವರ್ ಏರಿರುವ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹಾಗೂ ಐಗಳಿ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮನವೊಲಿಸಲು ಪ್ರಯತ್ನಿಸಿದ ಬಳಿಕ ಸಿಬ್ಬಂದಿ ರೈತನನ್ನು ಸುರಕ್ಷಿತವಾಗಿ ಕೆಳಗಿಳಿಸುವಲ್ಲಿ ಯಶಸ್ವಿಯಾದರು.


ಕಾಲುವೆಗೆ ಕೂಡಲೇ ನೀರು ಹರಿಸಿ ರೈತರ ಬೆಳೆಗಳನ್ನು ಉಳಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !