ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದು ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿಕೊಂಡ ಬೆಂಕಿಗೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳು ಸುಟ್ಟುಹೋಗಿದ್ದು, ಒಳಗಿದ್ದವರು ಹೊರಬರಲಾಗದೆ ಬೆಂಕಿಗೆ ಸಿಲುಕಿದ್ದಾರೆ.
ಇದನ್ನೂ ಓದಿ:
ಘಟನೆಯಲ್ಲಿ ಗಜಾನನ ರಾಜಾರಾಮ ದಮೋನೆ (65), ಶಾರದಾ ದಮೋನೆ (45), ಭಾರತಿ ರಾಜಾರಾಮ ದಮೋನೆ (50) ಹಾಗೂ ರೋಷನ್ ಗಜಾನನ ದಮೋನೆ (21) ಮೃತಪಟ್ಟಿದ್ದಾರೆ. ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಗಂಭೀರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



