September 16, 2026
Wednesday, September 16, 2026
spot_img

ಗಣೇಶ ಮೂರ್ತಿ ಮೆರವಣಿಗೆ ವೇಳೆ ಗಲಾಟೆ: ಹುಕ್ಕೇರಿ ತಾಲೂಕಿನ ಬಾಡ ಗ್ರಾಮದಲ್ಲಿ ಉದ್ವಿಗ್ನತೆ

ಹೊಸದಿಗಂತ ವರದಿ ​ಬೆಳಗಾವಿ:

ಗಣೇಶ ಮೂರ್ತಿಯನ್ನು ತರುವ ಮೆರವಣಿಗೆಯ ಸಂದರ್ಭದಲ್ಲಿ ಯುವಕರ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಮಾತಿನ ಚಕಮಕಿ ಬಳಿಕ ಕಲ್ಲು ತೂರಾಟ ಹಾಗೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಹುಕ್ಕೇರಿ ತಾಲೂಕಿನ ಬಾಡ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

​ಮೆರವಣಿಗೆ ಸಾಗುತ್ತಿದ್ದಾಗ ಉಂಟಾದ ಸಣ್ಣ ವಿಚಾರದ ಗೊಂದಲವು ವಿಕೋಪಕ್ಕೆ ತಿರುಗಿ, ಎರಡೂ ಗುಂಪಿನ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಕೆಲಕಾಲ ಭೀತಿ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಗಲಾಟೆಯ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಪ್ರಸ್ತುತ ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗುತ್ತಿವೆ.

​ಘಟನೆಗೆ ನಿಖರವಾದ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಹುಕ್ಕೇರಿ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವೈರಲ್ ವಿಡಿಯೋ ಆಧರಿಸಿ ಮಾಹಿತಿ ಕಲೆಹಾಕುತ್ತಿದ್ದು, ಗಲಾಟೆಯಲ್ಲಿ ಭಾಗಿಯಾದವರ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ. ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !