September 20, 2026
Sunday, September 20, 2026
spot_img

ಸಿಎಂ ಭೇಟಿಗೂ ಮುನ್ನವೇ ಸಕಲೇಶಪುರದಲ್ಲಿ ಕಳ್ಳರ ಕೈಚಳಕ: ಬೆಳ್ಳಂಬೆಳಗ್ಗೆ ಮಹಿಳೆಯ ಚಿನ್ನದ ಸರ ಎಗರಿಸಿದ ಖದೀಮರು

ಹೊಸದಿಗಂತ ವರದಿ ಹಾಸನ :

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಕಲೇಶಪುರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದರೂ, ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ಸಕಲೇಶಪುರ ಪಟ್ಟಣದ ಹೊಳೆಮಲ್ಲೇಶ್ವರ ದೇವಸ್ಥಾನದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ 45 ಗ್ರಾಂ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬ್ರಾಹ್ಮಣರ ಬೀದಿ ನಿವಾಸಿ ಹಾಗೂ ನಿವೃತ್ತ ಕೆಎಸ್‌ಆರ್‌ಟಿಸಿ ಚಾಲಕ ಶಾಂತಪ್ಪ ಅವರ ಪತ್ನಿ ರಾಣಿ ಸರ ಕಳೆದುಕೊಂಡ ಮಹಿಳೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳ ಪೈಕಿ ಹಿಂಬದಿ ಕುಳಿತಿದ್ದ ವ್ಯಕ್ತಿ ರಾಣಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ:

ಕಳುವಾದ ಸರದ ಮೌಲ್ಯ ಸುಮಾರು 7 ಲಕ್ಷ ರೂ. ಎಂದು ತಿಳಿದುಬಂದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೇ ನಡೆದಿರುವ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಸಕಲೇಶಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !