ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವರುಣನ ಆರ್ಭಟ ಮತ್ತೆ ಜೋರಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಸೆ. 23 ಮತ್ತು 24 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ಘೋಷಿಸಲಾಗಿದೆ.
ಕರಾವಳಿಯಲ್ಲಿ ಸತತ 4 ದಿನ ಮಳೆ
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಸೆ.21 ರಿಂದ 25 ರ ಅವಧಿಯಲ್ಲಿ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಸೆ. 22, 23, 24 ಮತ್ತು 25 ರಂದು ಸತತ ನಾಲ್ಕು ದಿನಗಳ ಕಾಲ ಬಿಡದೇ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.
ಮಲೆನಾಡು ಜಿಲ್ಲೆಗಳಲ್ಲೂ ಮಳೆ
ಕರಾವಳಿಗೆ ಹೊಂದಿಕೊಂಡಿರುವ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಮುಂಗಾರು ಚುರುಕಾಗಲಿದ್ದು, ಮುಂದಿನ 3-4 ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಗಂಟೆಗೆ 40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ
ಮಳೆಯ ಜತೆಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳ ಜನರಿಗೆ ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಕೋರಿದೆ.



