ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಅಕ್ಟೋಬರ್ 23ರಂದು ಮತದಾನ ನಡೆಯಲಿದೆ.
ಎರಡು ಪದವೀಧರರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದ 11, ಬಿಹಾರದ 8, ಮಹಾರಾಷ್ಟ್ರದ 5 ಹಾಗೂ ಕರ್ನಾಟಕದ 4 ಸ್ಥಾನಗಳು ಸೇರಿದಂತೆ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಎಲೆಕ್ಷನ್ ವಿವರ ಇಲ್ಲಿದೆ ನೋಡಿ
ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 9ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಅಕ್ಟೋಬರ್ 23ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ:
ರಾಜ್ಯದಲ್ಲಿ ನಾಲ್ವರ ಅವಧಿ ಮುಕ್ತಾಯ
ಕರ್ನಾಟಕದಲ್ಲಿ ನವೆಂಬರ್ 11ರಂದು ನಾಲ್ವರು ಹಾಲಿ ಸದಸ್ಯರ ಅವಧಿ ಮುಕ್ತಾಯವಾಗಲಿದೆ. ಆಗ್ನೇಯ ಪದವೀಧರರ ಕ್ಷೇತ್ರದ ಚಿದಾನಂದ ಎಂ. ಗೌಡ, ಪಶ್ಚಿಮ ಪದವೀಧರರ ಕ್ಷೇತ್ರದ ಎಸ್.ವಿ. ಸಂಕನೂರ, ಈಶಾನ್ಯ ಶಿಕ್ಷಕರ ಕ್ಷೇತ್ರದ ಶಶೀಲ್ ಜಿ. ನಮೋಶಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ಅವರ ಅವಧಿ ಪೂರ್ಣಗೊಳ್ಳಲಿದೆ.
ಈ ನಾಲ್ಕು ಸ್ಥಾನಗಳಿಗಾಗಿ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಸಂಬಂಧಿತ ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಕ್ಟೋಬರ್ 27ರಂದು ಫಲಿತಾಂಶ ಪ್ರಕಟವಾಗಲಿದ್ದು, ನಾಲ್ಕು ಕ್ಷೇತ್ರಗಳ ಹೊಸ ಪ್ರತಿನಿಧಿಗಳು ಯಾರು ಎಂಬುದು ಸ್ಪಷ್ಟವಾಗಲಿದೆ.



