ಹೊಸದಿಗಂತ ಮಂಗಳೂರು:
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪ್ಯದಲ್ಲಿ 2019ರಲ್ಲಿ ನಡೆದ ಕಾರ್ತಿಕ್ ಮೆರ್ಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ತಲಾ 3 ರೂ. ಲಕ್ಷ ದಂಡ ವಿಧಿಸಿದೆ.
ಏನಿದು ಪ್ರಕರಣ?
2019ರ ಸೆಪ್ಟೆಂಬರ್ 3ರಂದು ಸಂಪ್ಯದಲ್ಲಿ ಕಾರ್ತಿಕ್ ಮೆರ್ಲ ಎಂಬ ಯುವಕನ ಕೊಲೆ ನಡೆದಿತ್ತು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿತ್ತು. ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಪೊಲೀಸ್ ನಿರೀಕ್ಷಕ ನಾಗೇಶ್ ಕದ್ರಿ, ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಪ್ರೀತು ಅಲಿಯಾಸ್ ಪ್ರೀತೇಶ್ ಸುಲಾಯ, ಚರಣ್, ಕಿರಣ್ ಅಲಿಯಾಸ್ ಮಣಿ ಹಾಗೂ ಸಂತು ಅಲಿಯಾಸ್ ಸ್ಟಿವನ್ ಮಾಂತೇರೋ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ನಡೆಸಿದ 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಯ್ಕ್ ಅವರು, ಆರೋಪಿಗಳ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರೀತು ಅಲಿಯಾಸ್ ಪ್ರೀತೇಶ್ ಸುಲಾಯ ಹಾಗೂ ಕಿರಣ್ ಅಲಿಯಾಸ್ ಮಣಿ ಅವರಿಗೆ ಭಾರತೀಯ ದಂಡ ಸಂಹಿತೆಯ ಕಲಂ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿದ್ದಾರೆ. ಅದೇ ರೀತಿ, ಕಲಂ 341ರ ಅಡಿಯಲ್ಲಿ ಮೂರು ತಿಂಗಳ ಸಾದಾ ಶಿಕ್ಷೆ ಹಾಗೂ 500 ರೂ. ದಂಡ ವಿಧಿಸಲಾಗಿದೆ.
ಪ್ರಕರಣದಲ್ಲಿನ ಮತ್ತೊಬ್ಬ ಆರೋಪಿ ಸಂತು ಅಲಿಯಾಸ್ ಸ್ಟಿವನ್ ಮಾಂತೇರೋ ಅವರನ್ನು ನ್ಯಾಯಾಲಯ ನಿರ್ದೋಷಿ ಎಂದು ತೀರ್ಪು ನೀಡಿದೆ. ಮತ್ತೋರ್ವ ಆರೋಪಿ ಚರಣ್ ಈಗಾಗಲೇ ಮೃತಪಟ್ಟಿದ್ದಾನೆ. ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾದ ಜಯಂತಿ ಕೆ. ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.



