ಹೊಸದಿಗಂತ ವರದಿ ಕಲಬುರಗಿ:
ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇಂದು ಸಂಜೆ 6 ಗಂಟೆಗೆ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ.
ಕನೇರಿ ಮಠದ ಪೂಜ್ಯ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯಲಿರುವ ಸಮಾವೇಶದಲ್ಲಿ 250ಕ್ಕೂ ಹೆಚ್ಚು ಮಠಾಧೀಶರು, ಶಿವಶರಣರು ಹಾಗೂ ವಿವಿಧ ಸಮಾಜಗಳ ಮುಖಂಡರು ಭಾಗವಹಿಸಲಿದ್ದಾರೆ.
ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ಸಮಾವೇಶದ ಅಂಗವಾಗಿ ಸಂಜೆ 4 ಗಂಟೆಗೆ ಜಗತ್ ವೃತ್ತದಿಂದ ಭವ್ಯ ಕುಂಭ-ಕಳಸ ಮೆರವಣಿಗೆ ನಡೆಯಲಿದ್ದು, 2 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಲಿದ್ದಾರೆ. ಮೆರವಣಿಗೆಯಲ್ಲಿ 80ಕ್ಕೂ ಹೆಚ್ಚು ಶಿವಶರಣರ ಭಾವಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದ್ದು, ಇದು ವಿಶೇಷ ಆಕರ್ಷಣೆಯಾಗಲಿದೆ.
ಇದನ್ನೂ ಓದಿ:
ಸಮಾವೇಶಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಆಸನ ವ್ಯವಸ್ಥೆ, ಕುಡಿಯುವ ನೀರು, ವಾಹನ ನಿಲುಗಡೆ ಹಾಗೂ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕಾಯಕ, ದಾಸೋಹ, ಶಿಕ್ಷಣ, ಆರೋಗ್ಯ ಹಾಗೂ ಸಾವಯವ ಕೃಷಿ ಸೇರಿದಂತೆ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಗುವುದು. ಸಮಾವೇಶದಲ್ಲಿ ಎಲ್ಲ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.



