ಹೊಸದಿಗಂತ ವರದಿ ಮಡಿಕೇರಿ:
ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಡಿಕೇರಿ ಟ್ರಾಫಿಕ್ ಪೊಲೀಸರು ಬೈಕ್ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ.
ಬಾಡಿಗೆ ದ್ವಿಚಕ್ರವನ್ನು ಪಡೆದು ಏಕಮುಖ ಮಾರ್ಗದಲ್ಲಿ ವಾಹನ ಚಲಾಯಿಸಿದ್ದೂ ಅಲ್ಲದೆ, ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿ ನಿಯಮ ಉಲ್ಲಂಘಿಸಿದ ಪ್ರಕರಣದಲ್ಲಿ ಪ್ರವಾಸಿಗನೊಬ್ಬನಿಗೆ ₹10,000 ದಂಡ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಸವಾರರನ್ನು ಪೊಲೀಸರು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ನಗರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಬೈಕ್ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದು, ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿದೆ.
ಸಂಚಾರ ನಿಯಮಗಳನ್ನು ಪಾಲಿಸುವಂತೆ ಹಾಗೂ ವಾಹನ ಚಾಲನೆ ವೇಳೆ ಹೆಲ್ಮೆಟ್ ಧರಿಸುವುದು, ಮೊಬೈಲ್ ಬಳಸದಿರುವುದು, ನಿಯಮಾನುಸಾರ ವಾಹನ ನಿಲ್ಲಿಸುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಪೊಲೀಸರು ಸೂಚಿಸಿದ್ದಾರೆ.



