September 30, 2026
Wednesday, September 30, 2026
spot_img

WEATHER | ರಾಜ್ಯಾದ್ಯಂತ ವರುಣನ ಆರ್ಭಟ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಇನ್ನೂ ತಗ್ಗಿಲ್ಲ. ಇಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಗುಡುಗು-ಸಿಡಿಲಿನ ಆರ್ಭಟ

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇದರ ಜೊತೆಗೆ ಮೈಸೂರು, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಭಾರೀ ಮಳೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಮೋಡಕವಿದ ವಾತಾವರಣದಿಂದ ಕೂಡಿರಲಿದೆ.

ಕರಾವಳಿಯಲ್ಲಿ ಜಿಟಿಜಿಟಿ ಮಳೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಮುದ್ರ ತೀರದ ಪ್ರದೇಶಗಳಲ್ಲಿ ಬಿರುಗಾಳಿಯ ಚಲನೆ ಹೆಚ್ಚಿರಲಿದ್ದು, ಮೀನುಗಾರರು ಮತ್ತು ನಿವಾಸಿಗಳು ಎಚ್ಚರಿಕೆಯಿಂದಿರಲು ಕೋರಲಾಗಿದೆ.

ಗುಡುಗು, ಸಿಡಿಲು ಹೆಚ್ಚಿರುವ ಸಮಯದಲ್ಲಿ ಸಾರ್ವಜನಿಕರು ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಒಳಿತು.

Must Read