ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಯನ್ನು ಎಸ್‌ಐಟಿ ತಂಡಕ್ಕೆ ವಹಿಸಲಾಗಿದ್ದು, ಈ ತಂಡದಿಂದ ತಮ್ಮನ್ನು ಕೈಬಿಡುವಂತೆ ಎಎಸ್‌ಪಿ ಡಾ. ವೆಂಕಟೇಶ್ ಪ್ರಸನ್ನ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಈ ಪ್ರಕರಣದ ತನಿಖೆಯನ್ನು ಆರಂಭದಿಂದ ಮಾಡುವಂತೆ ಎಸ್‌ಐಟಿ ತಂಡಕ್ಕೆ ಸೂಚನೆ ನೀಡಲಾಗಿತ್ತು. ರಾಜ್ಯ ಸರ್ಕಾರ ರಚಿಸಿದ್ದ ಎಸ್‌ಐಟಿ ತಂಡದಲ್ಲಿ ಎಎಸ್‌ಪಿ ಡಾ. ವೆಂಕಟೇಶ ಪ್ರಸನ್ನ ಇದ್ದರು. ಆದರೆ ಸೌಜನ್ಯ ತಾಯಿ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡದಿಂದ ಹೊರಬರಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ವೆಂಕಟೇಶ್ ಪ್ರಸನ್ನ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ಐಜಿಪಿ ಶಶಿಕುಮಾರ್ ನೇತೃತ್ವದ ಈ ತಂಡದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಮತ್ತು ಡಿಐಜಿ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಗುಪ್ತದಳದ ಎಸ್‌ಪಿ ನಿಶಾ ಜೇಮ್ಸ್, ಸಿಐಡಿ ಎಸ್‌ಪಿ ಲೋಕೇಶ್ ಜಗಲಸಾರ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಎಸ್ಪಿ ವೆಂಕಟೇಶ್ ಪ್ರಸನ್ನ ಇದ್ದಾರೆ.



