ಹೊಸದಿಗಂತ ವರದಿ ಕಲಬುರಗಿ:
ನಗರದ ಕೋಟೆ ಎದುರು ನಡೆಯುತ್ತಿರುವ ಹಿಂದೂ ಮಹಾಗಣಪತಿ ಸಮಿತಿಯ 21 ದಿನಗಳ ಗಣೇಶೋತ್ಸವ ಕಾರ್ಯಕ್ರಮದ ಹಿನ್ನೆಲೆ,ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರಿಗೆ ಕಲಬುರಗಿ ನಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ನಗರ ಪ್ರವೇಶಿಸದಂತೆ ಕಲಬುರಗಿ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 1ರಂದು ನಡೆಯಲಿದ್ದ ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಮುಖ್ಯ ಭಾಷಣಕಾರರಾಗಿ ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ ನಗರದಲ್ಲಿ ಗಣೇಶೋತ್ಸವ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶ್ರೀಕಾಂತ್ ಶೆಟ್ಟಿ ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆಗಳು ಹಾಗೂ ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಉಡುಪಿ, ಮಣಿಪಾಲ, ಕಾರ್ಕಳ, ಮಂಗಳೂರು ಹಾಗೂ ಪುತ್ತೂರು ಠಾಣೆಗಳಲ್ಲಿನ ಪ್ರಕರಣಗಳ ವಿವರಗಳನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಈ ಹಿಂದೆ ನಡೆದ ಕೆಲವು ಘಟನೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆಗೆ ಭಂಗ ಉಂಟಾಗುವ ಸಾಧ್ಯತೆಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪ್ರವೇಶ ನಿರ್ಬಂಧ ಹೇರಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಗಣೇಶೋತ್ಸವ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.



