ಹೊಸದಿಗಂತ ವರದಿ ಚಿತ್ರದುರ್ಗ:
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ದಲಿತರು, ಶೋಷಿತರ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿತ್ತು. ಆದರೆ ಸ್ವಾತಂತ್ರ್ಯಾ ನಂತರ 50ಕ್ಕೂ ಹೆಚ್ಚು ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಅದನ್ನು ಅನುಷ್ಠಾನ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಒಳ ಮೀಸಲಾತಿ ಕಗ್ಗಂಟು ಬಿಡಿಸಿದ ನರೇಂದ್ರ ಮೋದಿಯವರ 25 ವರ್ಷಗಳ ಆಡಳಿತ ಸೇವಾ ಸಂಕಲ್ಪ ಅಭಿಯಾನ ಆಯೋಜನಾ ಸಮಿತಿ ವತಿಯಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾದಿಗ ಕಾರ್ಯಕರ್ತರ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಂಬೇಡ್ಕರ್‌ಗೆ ಅನ್ಯಾಯ ಮಾಡಿದ ಕಾಂಗ್ರೆಸ್
ಸದಾ ಅಂಬೇಡ್ಕರ್ ಹೆಸರನ್ನೇ ಜಪ ಮಾಡಿಕೊಂಡು ಬೇಳೆ ಬೇಯಿಸಿಕೊಳ್ಳುವ ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರಿಗೆ ಸಾಕಷ್ಟು ಅನ್ಯಾಯ ಮಾಡಿದೆ. ದೆಹಲಿಯಲ್ಲಿ ಅವರ ಶವ ಸಂಸ್ಕಾರಕ್ಕೆ ಜಾಗ ನೀಡಲಿಲ್ಲ. ಕಾಂಗ್ರೆಸ್ ಪಕ್ಷದವರು ಅಂಬೇಡ್ಕರ್ ಮತ್ತು ದೇವರಾಜ ಅರಸು ಅವರ ಹೆಸರು ಹೇಳಿಕೊಂಡು ಶೋಷಿತರನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಶೋಷಿತರ ಪರ ಕಾಳಜಿ ಇಲ್ಲ
ಸಿದ್ದರಾಮಯ್ಯ ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದರು. ತಾವು ದೇವರಾಜ ಅರಸು ಅವರಿಗಿಂತ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಯಾಗಿದ್ದೇನೆಂದು ಬೀಗುತ್ತಿದ್ದಾರೆ. ಆದರೆ ದೇವರಾಜ ಅರಸು ಅವರಂತೆ ದಲಿತರು, ಶೋಷಿತರ ಪರ ಕಾಳಜಿ ತೋರಲಿಲ್ಲ. ದಲಿತರಿಗೆ ಸಿಗಬೇಕಾದ ಮೀಸಲಾತಿಗೆ ಕಲ್ಲು ಹಾಕಿದರು. ಒಳ ಮೀಸಲಾತಿ ಜಾರಿ ಮಾಡುವಲ್ಲಿ ಮೀನಾಮೇಷ ಎಣಿಸಿದರು. ಮೀಸಲಾತಿ ಕುರಿತು ಕಾಂಗ್ರೆಸ್ ಕಪಟ ನಾಟಕ ಮಾಡುತ್ತಿದೆ ಎಂದ ಹರಿಹಾಯ್ದರು.
ಗ್ಯಾರಂಟಿ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ
ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೇಸ್ ರಾಜ್ಯದ ಖಜಾನೆ ಖಾಲಿ ಮಾಡಿದೆ. ಅಭಿವೃದ್ಧಿ ನಿಗಮಗಳಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ನೀಡಲು ಹಣವಿಲ್ಲ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ಹೋಗಲು ಬಸ್‌ಗಳ ವ್ಯವಸ್ಥೆ ಇಲ್ಲ. ವಿಕಲಚೇತನರ ವೇತನ, ವೃದ್ದಾಪ್ಯ ವೇತನ, ವಿಧವಾ ವೇತನ ನೀಡುತ್ತಿಲ್ಲ. ರೈತರ ಮಕ್ಕಳ ರೈತ ವಿದ್ಯಾನಿಧಿ, ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿದ್ದ 6000 ರೂ. ಸ್ಥಗಿತಗೊಳಿಸಿದ್ದಾರೆ ಎಂದು ಕಿಡಿಕಾರಿದರು.
ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರುಪಯೋಗ
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯುಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ತಮ್ಮ ಅಧಿಕಾರದ ಅವಧಿಯಲ್ಲಿ ಶೋಷಿತರ ಪರವಾಗಿ ನಿಂತರು. ಬಿಜೆಪಿ ಸರ್ಕಾರ ಪ್ರತಿ ವರ್ಷದ ಬಜೆಟ್‌ನಲ್ಲಿ 25 ರಿಂದ 30 ಸಾವಿರ ಕೋಟಿ ಎಸ್‌ಸಿಪಿ, ಟಿಎಸ್‌ಪಿ ಅನುದಾನ ನೀಡಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ 55 ಸಾವಿರ ಕೋಟಿ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ದುರುಪಯೋಗ ಮಾಡಿಕೊಂಡಿದೆ ಎಂದು ಹೇಳಿದರು.
ರಾಜ್ಯದ ಜನ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದೆ
ರಾಜ್ಯದ ವಿವಿಧೆಡೆಗಳಲ್ಲಿ ಮಾದಿಗ ಸಮುದಾಯದ ಹೆಣ್ಣುಮಕ್ಕಳ ಮೇಲೆ ನಿರಂತರ ದೌರ್ಜನ್ಯ, ಅತ್ಯಾಚಾರ ನಡೆಯುತ್ತಿದೆ. ರಾಜ್ಯ ಸರ್ಕಾರ ಇದನ್ನು ತಡೆಯುವ ಪ್ರಯತ್ನ ಮಾಡುತ್ತಿಲ್ಲ. ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು. ತಪ್ಪಿದಲ್ಲಿ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಇಂತಹ ದುರಾಡಳಿತದ ಸರ್ಕಾರವನ್ನು ಕಿತ್ತುಹಾಕಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜನ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಮಾಜಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, ವಿವಿಧ ರಾಜ್ಯಗಳು ಒಳಮೀಸಲಾತಿ ಜಾರಿ ಮಾಡಿವೆ. ಅದರಿಂದ ಶೋಷಿತ ಸಮುದಾಯಗಳಿಗೆ ಸಾಕಷ್ಟು ಅನುಕೂಲವಾಗಿದೆ. ಆದರೆ ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೇಸ್ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡಿಲ್ಲ. ಅದು ಇನ್ನೂ ಕ್ಯಾಬಿನೆಟ್‌ನಲ್ಲೇ ಇದೆ. ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಗೋವಿಂದ ಕಾರಜೋಳ ಮಾತನಾಡಿದರು. ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ್, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಹನುಮಂತೇಗೌಡ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ದಲಿತ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.



