October 1, 2026
Thursday, October 1, 2026
spot_img

WEATHER | ಕರಾವಳಿ-ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಜನತೆಗೆ ಮಳೆರಾಯ ಮತ್ತೆ ತಂಪೆರೆಯಲು ಸಜ್ಜಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ನೈಋತ್ಯ ಮುಂಗಾರು ಮಾರುತಗಳು ದಕ್ಷಿಣ ಒಳನಾಡಿನಲ್ಲಿ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಪ್ರದೇಶಗಳಲ್ಲಿ ಸಿಡಿಲು-ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರಾವಳಿ ಭಾಗ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಸಾಧಾರಣದಿಂದ ಉತ್ತಮ ಮಳೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು ಹಾಗೂ ಮಲೆನಾಡು

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯಲಿದೆ.

ಮಳೆ ಹಾಗೂ ಸಿಡಿಲು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಬಿರುಗಾಳಿಯ ಮುನ್ನೆಚ್ಚರಿಕೆ ಇರುವುದರಿಂದ ವಾಹನ ಸವಾರರು ಜಾಗರೂಕರಾಗಿರಲು ಹವಾಮಾನ ಇಲಾಖೆ ಮನವಿ ಮಾಡಿದೆ.

Must Read