ಹೊಸದಿಗಂತ ವರದಿ ಬೆಳಗಾವಿ:
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ವ್ಯವಸ್ಥಾಪಕ ಹಾಗೂ ಕಂಪನಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಕನಿಕಾಪ್ರಸಾದ್ ಅವರ ನೇಮಕಾತಿ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸುವಂತೆ ಆಗ್ರಹಿಸಿ ಮಾಹಿತಿ ಹಕ್ಕು ಹೋರಾಟಗಾರ ಮಂಜುನಾಥ ಬನಶಂಕರಿ ಅವರು ಅ. 2ರಂದು ಗಾಂಧಿ ಜಯಂತಿ ಅಂಗವಾಗಿ ನಗರಾಭಿವೃದ್ಧಿ ಇಲಾಖೆಯ ಕಚೇರಿ ಎದುರು ಏಕಾಂಗಿ ಅಹೋರಾತ್ರಿ ಧರಣಿ ಆರಂಭಿಸಿದರು.
ಕನಿಕಾಪ್ರಸಾದ್ ಅವರು ಪದವಿ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಲೆಕ್ಕ ಸಹಾಯಕ ಹುದ್ದೆಯಲ್ಲಿ ಕಾರ್ಯನಿರ್ವಹಿಸಿ, ನಂತರ ಬೆಳಗಾವಿ ನಗರಾಭಿವೃದ್ಧಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಬನಶಂಕರಿ ಆರೋಪಿಸಿದರು. ಅವರ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳು, ಅನುಭವ ಪ್ರಮಾಣಪತ್ರ ಹಾಗೂ ವಿದ್ಯಾರ್ಹತೆಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಸ್ಮಾರ್ಟ್ ಸಿಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಕಾಪ್ರಸಾದ್ ಹಾಗೂ ಎಂಡಿ ಕವಿತಾ ಎಂ. ವಾರಂಗಲ್ ಅವರ ಕಾರ್ಯನಿರ್ವಹಣೆ ಮತ್ತು ನೇಮಕಾತಿ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು. ಆರೋಪಗಳು ಸಾಬೀತಾದಲ್ಲಿ ಅಮಾನತು ಸೇರಿದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರಾಭಿವೃದ್ಧಿ ಇಲಾಖೆಯ ಆಡಳಿತ ಹಾಗೂ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದ ದಾಖಲೆಗಳಲ್ಲಿ ಪಾರದರ್ಶಕತೆ ಕಾಪಾಡಬೇಕು. ಸಾರ್ವಜನಿಕರಿಗೆ ಅಗತ್ಯ ಮಾಹಿತಿಯನ್ನು ಕಾನೂನುಬದ್ಧವಾಗಿ ಒದಗಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಿಗೆ ಧರಣಿ ಮೂಲಕ ಆಗ್ರಹಿಸಿದರು.



