ಹೊಸದಿಗಂತ ವರದಿ ಧಾರವಾಡ :
ಕರ್ನಾಟಕ ವಿಧಾನ ಪರಿಷತ್‌ನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿ ಮಾಜಿ ಶಾಸಕ ಮೋಹನ ಲಿಂಬಿಕಾಯಿ ಅವರು ಸೋಮವಾರ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರು ತಮ್ಮ ಬೆಂಬಲಿಗರು ಮತ್ತು ಪಕ್ಷದ ಹಿರಿಯ ಮುಖಂಡರೊಂದಿಗೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಪದವೀಧರರು, ಶಿಕ್ಷಕರು ಮತ್ತು ಯುವಜನರ ಸಮಸ್ಯೆಗಳಿಗೆ ಧ್ವನಿಯಾಗುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದರು.
ರಾಜ್ಯ ಸರ್ಕಾರದ ಜನಪರ ಯೋಜನೆಗಳು ಹಾಗೂ ಪದವೀಧರರ ಪರವಾದ ನಿಲುವನ್ನು ಆಧರಿಸಿ ಮತದಾರರು ನನ್ನನ್ನು ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಶಾಸಕರು, ಮಾಜಿ ಜನಪ್ರತಿನಿಧಿಗಳು ಹಾಗೂ ನೂರಾರು ಬೆಂಬಲಿಗರು ಉಪಸ್ಥಿತರಿದ್ದು, ಪಕ್ಷದ ಅಭ್ಯರ್ಥಿಗೆ ಸಾಥ್ ನೀಡಿದರು.



