ಹೊಸದಿಗಂತ ವರದಿ ಧಾರವಾಡ:
ರಾಜ್ಯ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಅ. 23ರಂದು ನಡೆಯುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರೊ. ಎಸ್.ವಿ. ಸಂಕನೂರ ಅವರು, ಭಾರಿ ಅಂತರದಿಂದ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪ್ರೊ. ಸಂಕನೂರ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಪ್ರೊ. ಸಂಕನೂರ ಅವರು ಈಗಾಗಲೇ ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿ ಸಂಕನೂರ ಅವರು ಗೆಲುವು ಸಾಧಿಸಲಿದ್ದಾರೆ ಎಂದರು.
ಈ ಬಾರಿಯ ನಾಲ್ಕೂ ಪರಿಷತ್ ಚುನಾವಣೆಯ ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವ ಸ್ಪಷ್ಟ ಸೂಚನೆಗಳು ಕಾಣಿಸುತ್ತಿವೆ ಎಂದು ಪ್ರಶ್ನೆಗೆ ಉತ್ತರಿಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಸವರಾಜ ಹೊರಟ್ಟಿ, ಮಹೇಶ ಟೆಂಗಿನಕಾಯಿ ಸೇರಿ ಅನೇಕ ಮುಖಂಡರು ಇದ್ದರು.



