October 7, 2026
Wednesday, October 7, 2026
spot_img

‘ತಮ್ಮ ತಪ್ಪು ಮುಚ್ಚಿಡಲು ಡಿ.ಕೆ. ಶಿವಕುಮಾರ್ ನಾಟಕ ಆಡುತ್ತಿದ್ದಾರೆ’: ಸಿಎಂ ವಿರುದ್ಧ ಬಸವರಾಜ ಬೊಮ್ಮಾಯಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಫಾರ್ಮ್ 7 ಸಲ್ಲಿಕೆ ವಿವಾದಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕರು ತಮ್ಮದೇ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಈ ರೀತಿಯ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

 ಚುನಾವಣಾ ನಿಯಮಾವಳಿಗಳಿಗೆ ಒಳಪಟ್ಟೇ ಫಾರ್ಮ್ 7 ಅನ್ನು ಭರ್ತಿ ಮಾಡಲಾಗಿದ್ದು, ಇದರಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ಕೇವಲ ರಾಜಕೀಯ ಲಾಭಕ್ಕಾಗಿ ಹಾಗೂ ಮತದಾರರಲ್ಲಿ ಗೊಂದಲ ಸೃಷ್ಟಿಸಲು ಚುನಾವಣಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸುವ ನಾಟಕವಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ನಕಲಿ ಮತಗಳ ಮೂಲಕವೇ ಚುನಾವಣೆ ಗೆಲ್ಲುತ್ತಾ ಬಂದಿದ್ದು, ಈಗ ಆ ನಕಲಿ ಮತಗಳನ್ನು ಉಳಿಸಿಕೊಳ್ಳಲು ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಆಯೋಗದ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಬೊಮ್ಮಾಯಿ ಗಂಭೀರವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ:

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರವು ತನಗೆ ಇಷ್ಟಬಂದಂತೆ ಖಾಸಗಿ ದೂರುಗಳ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುತ್ತಿರುವುದು ಕಾನೂನುಬಾಹಿರ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯೋಗದ ಲಿಖಿತ ದೂರು ಇಲ್ಲದೆ ಇಂತಹ ಪ್ರಕರಣಗಳನ್ನು ದಾಖಲಿಸುವ ಅಧಿಕಾರ ಪೊಲೀಸರಿಗಿಲ್ಲ ಎಂದಿದ್ದಾರೆ.

Must Read